ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಹೆಚ್ಚಿಸಬೇಕೆಂಬ ವಾಲ್ಮೀಕಿ ಸಮುದಾಯದ ಬೇಡಿಕೆಯನ್ನು ನ್ಯಾಯಯುತವಾಗಿ ಒದಗಿಸಲು ಪ್ರಯತ್ನಿಸುತ್ತೇನೆ. ಆದರೆ, ಇದು ಸುಲಭವಲ್ಲ , ಸವಾಲಿನ ಕೆಲಸ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , “ಯಾವ ರೀತಿ ಮೀಸಲಾತಿ ಹೆಚ್ಚಿಸಬಹುದೆಂಬ ಬಗ್ಗೆ ಕಾನೂನು ತಜ್ಞರ ಸಮಿತಿ ರಚಿಸಲಾಗಿದೆ. ನಾಡಿನ ಹಿತ ಮತ್ತು ಜನಾಂಗದ ಹಿತ ಗಮನದಲ್ಲಿ ಇಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಬೇಕಾಗಿದೆ ” ಎಂದರು.
ಇದೇ ಸಂದರ್ಭದಲ್ಲಿ ಅವರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಾಮಾಜಿಕ ಮಾಧ್ಯಮಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್, ಹಾಗೂ ಟ್ವಿಟರ್, ಯ್ಯೂಟುಬ್ ಚಾನೆಲ್ ಗೆ ಚಾಲನೆ ನೀಡಿದರು.
” ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿಯವರಲ್ಲಿ ಬೇಡಿಕೆ ಇಟ್ಟಾಗಿದೆ. ಅವರು ಮೀಸಲಾತಿಯನ್ನು ಹೆಚ್ಚಿಸುತ್ತಾರೆಂಬ ವಿಶ್ವಾಸವೂ ಇದೆ”.ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಕಾರ್ಯಕ್ರಮದಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರ, ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.