ತಮಿಳುನಾಡಿನಲ್ಲಿ ಸೋಮವಾರವೂ ಮಳೆ ಮುಂದುವರೆದಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ.
ಕಳೆದ ಎರಡು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ತಮಿಳು ನಾಡಿನ ಮೆಟ್ಟೂರು ಜಲಾಶಯದ ನೀರಿನ ಸಂಗ್ರಹ ಗರಿಷ್ಠ ಮಟ್ಟಕ್ಕೆ ತಲುಪಿದೆ. ಕರ್ನಾಟಕದ ಜಲಾಶಯಗಳಿಂದ ನೀರನ್ನು ಹೊರ ಬಿಡುತ್ತಿರುವುದು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಲಾಶಯ ಭರ್ತಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸೋಮವಾರ ಬೆಳಿಗ್ಗೆ ಮೆಟ್ಟೂರು ಜಲಾಶಯದ ಮಟ್ಟ 118.32 ಅಡಿ ಇತ್ತು. ಗರಿಷ್ಠ ಮಟ್ಟ 120 ಅಡಿ. ಜಲಾಶಯದಲ್ಲಿ 90 ಟಿಎಂಸಿ ಅಡಿ ನೀರಿನ ಸಂಗ್ರಹವಿದೆ. 150 ಕ್ಯೂಸೆಕ್ ನೀರನ್ನು ಕಾಲುವೆಗಳಿಗೆ ಹರಿಸಲಾಗುತ್ತಿದೆ. ನದಿಗೆ 100 ಕ್ಯೂಸೆಕ್ ನೀರು ಬಿಡಲಾಗುತ್ತಿದೆ ಎಂಬುದನ್ನು ಮೂಲಗಳು ತಿಳಿಸಿವೆ.
ರಾಜಧಾನಿ ಚೆನ್ನೈ ವಲಯ ಹಾಗೂ ರಾಜ್ಯದ ಉತ್ತರ ಭಾಗದ ಜಿಲ್ಲೆಗಳಾದ ಚೆಂಗಲ್ ಪೇಟ್, ಕಾಂಚಿಪುರಂ, ತಿರುವಳ್ಳೂರ್, ಮತ್ತು ವೆಲ್ಲೂರಿನಲ್ಲಿ ಮುಂಜಾನೆಯಿಂದ ಮಳೆಯಾಗುತ್ತಿತ್ತು. ಮುಂಜಾಗೃತ ಕ್ರಮವಾಗಿ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿತ್ತು.
ಚೆನ್ನೈನ ಬಹುತೇಕ ರಸ್ತೆಗಳು, ಅಂಡರ್ ಪಾಸ್ ಗಳು ಜಲಾವೃತಗೊಂಡಿದೆ. ಇದರಿಂದ ವಾಹನ ಸವಾರರಿಗೆ ತೊಂದರೆ ಯಾಗಿದೆ. ಜಲಾವೃತ ಆಡಂಬಾಕಂ ಪೊಲೀಸ್ ಠಾಣೆಯನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ಪರಿಹಾರ ಕಾರ್ಯಾಚರಣೆಗೆ ಚೆನ್ನೈ ಪಾಲಿಕೆಯು ಸುಮಾರು 23 ಸಾವಿರ ಸಿಬ್ಬಂದಿಗಳನ್ನು ನಿಯೋಜಿಸಿದೆ. ಮಳೆಯಿಂದ ಸಂತ್ರಸ್ತರಾಗಿರುವ ಎರಡು ಲಕ್ಷಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 3.36 ಲಕ್ಷ ಆಹಾರದ ಪೊಟ್ಟಣಗಳನ್ನು ವಿತರಿಸಲಾಗಿದೆ ಸೋಮವಾರ ಬೆಳಗಿನವರೆಗಿನ ಮಾಹಿತಿ ಪ್ರಕಾರ, ಜಲಾವೃತ ಪ್ರದೇಶಗಳ 889 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ. ಚೆನ್ನೈ 15 ವಲಯಗಳ ಮೇಲುಸ್ತುವಾರಿಗೆ 15 ಐಎಎಸ್ ಅಧಿಕಾರಿಗಳನ್ನು ಮುಖ್ಯಮಂತ್ರಿ ನಿಯೋಜಿಸಿದ್ದಾರೆ. 200 ವಿಶೇಷ ವೈದ್ಯಕೀಯ ಶಿಬಿರಗಳನ್ನು ತೆರೆಯಲಾಗಿದೆ. ತಗ್ಗು ಪ್ರದೇಶಗಳನ್ನು ಆವರಿಸಿರುವ ಕೆಸರು ಹಾಗೂ ಕಸವನ್ನು ತೆರವುಗೊಳಿಸಲು ಪಾಲಿಕೆ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಬುಧವಾರ ಮತ್ತು ಗುರುವಾರ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯ ಆಗ್ನೇಯ ದಿಕ್ಕಿನಲ್ಲಿ ಚಂಡಮಾರುತ ಉಂಟಾಗಿದ್ದು, ಇದರ ಪರಿಣಾಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಚೆನ್ನೈ : ಎಡೆಬಿಡದೆ ಕಾಡುತ್ತಿರುವ ಮಳೆರಾಯ
Date: