ಕೆಲ ತಿಂಗಳಿಂದ ಹತೋಟಿಯಲ್ಲಿ ಇದ್ದಂತಹ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಈಗ ಇದ್ದಕ್ಕಿಂದ್ದಂತೆ ಸ್ಪೋಟಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲೂ ಕೂಡ ಕೋವಿಡ್ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ನಗರದ ಗಾಡಿಕೊಪ್ಪ ಸಮೀಪದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ 29 ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. 29 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ನೆರೆಯ ಕೇರಳ ರಾಜ್ಯದವರು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ರಜೆಯ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದರು. ನವೆಂಬರ್ 23 ರಂದು ಕೇರಳದಿಂದ 23 ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಊರುಗಳಿಂದ ವಾಪಸ್ಸಾಗಿದ್ದರು. ವಸತಿನಿಲಯದಲ್ಲಿದ್ದ 384 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. ಕೋವಿಡ್ ಪರೀಕ್ಷೆಯ ವರದಿ ಬಂದಿದ್ದು 29 ವಿದ್ಯಾರ್ಥಿಗಳಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರಾರ್ಥಮಿಕ ಸಂಪರ್ಕದಲ್ಲಿರುವವರ ಪತ್ತೆ ಕಾರ್ಯ ಆರಂಭಿಸಲಾಗಿದೆ.
ನಂಜಪ್ಪ ಲೈಫ್ ಕೇರ್ ಆಸ್ಪತ್ರೆ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಸೇರಿದಂತೆ 800ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಸೋಂಕಿತ ವಿದ್ಯಾರ್ಥಿಗಳ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಸ್ಪತ್ರೆ ಸಿಬ್ಬಂದಿಯಲ್ಲಿ 9 ಮಂದಿಗೆ ಸೋಂಕು ದೃಡಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯ ಒಪಿಡಿ, ನರ್ಸಿಂಗ್ ಕಾಲೇಜು, ಹಾಸ್ಟೆಲ್ ಸಿಲ್ ಡೌನ್ ಮಾಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ.