ರಾಜ್ಯ ಸರ್ಕಾರ ಇತ್ತೀಚೆಗಷ್ಟೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಶುಲ್ಕವನ್ನು ಹೆಚ್ಚಳ ಮಾಡುತ್ತದೆ ಎಂಬ ಗೊಂದಲಕ್ಕೆ ಸರ್ಕಾರವೇ ತೆರೆ ಎಳೆದಿದೆ. ಈ ಬಗ್ಗೆ ಸರ್ಕಾರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಯಾವುದೇ ಶುಲ್ಕ ಹೆಚ್ಚಳ ಮಾಡುವುದಿಲ್ಲ ಎಂದು ತಿಳಿಸಿದೆ.
ಪ್ರಸ್ತುತ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕದ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ರವಾನಿಸಲಾಗಿದೆ ಹಾಗೂ ಈ ಶುಲ್ಕದ ವಿವರಗಳನ್ನು ಅಧಿಕೃತ ವೆಬ್ ನಲ್ಲಿ ಪ್ರಕಟಿಸಲಾಗಿದೆ. ಯಾವುದೇ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಅವಕಾಶ ಮಾಡಿಲ್ಲ.
ಪ್ರಸ್ತುತ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಕಟಿಸಿರುವ ಶುಲ್ಕದ ವಿವರ ಹೀಗಿದ್ದು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸರ್ಕಾರಿ ಎಂಬಿಬಿಎಸ್ ಕೋರ್ಸ್ ವರ್ಷಕ್ಕೆ 1,28,746 ರೂ. ನಿಗದಿಪಡಿಸಿದೆ. ಸರ್ಕಾರಿ ಮೆಡಿಕಲ್ ಕಾಲೇಜಿನ ಪ್ರವೇಶ ಶುಲ್ಕ 59,800 ರೂ. ನಿಗದಿ ಮಾಡಲಾಗಿದೆ ಹಾಗೂ ದಂತ ವೈದ್ಯಕೀಯ ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ವಾರ್ಷಿಕ 83,356 ರೂ. ನಿಗದಿ ಪಡಿಸಲಾಗಿದೆ.
ಕಳೆದ ವರ್ಷವೇ ಖಾಸಗಿ ಕಾಲೇಜು ಆಡಳಿತ ಮಂಡಳಿಗಳು ಸರ್ಕಾರಿ ಕೋಟಾದ ಸೀಟುಗಳ ಶುಲ್ಕದಲ್ಲಿ ಶೇ.30 ರಷ್ಟು ಹೆಚ್ಚಳ ಮಾಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದವು. ಯುಜಿಸಿ ನಿಟ್ 2021ನೇ ಸಾಲಿನ ವೈದ್ಯಕೀಯ ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳಿಗೆ ಜನವರಿ 29ರಿಂದ ಕೌನ್ಸಿಲಿಂಗ್ ಪ್ರಾರಂಭವಾಗಿದ್ದು, ಫೆಬ್ರವರಿ 7ಕ್ಕೆ ಮುಕ್ತಾಯವಾಗಲಿದೆ ಎಂದು ತಿಳಿದುಬಂದಿದೆ