ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸದಿದ್ದಲ್ಲಿ ಕೇಂದ್ರದ ಪಾಲಿನ ಅನುದಾನ ಕಡಿತವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಸಿಕ ಕೆಡಿಪಿ ಸಭೆ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡುತ್ತಿದ್ದರು.
ಸ್ಮಾರ್ಟ್ ಸಿಟಿ ಕಾಮಗಾರಿ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಮಾರ್ಚ್ ಒಳಗಾಗಿ ಕಾಮಗಾರಿ ಅನುಷ್ಠಾನ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಕೇಂದ್ರದ ಪಾಲಿನ ಅನುದಾನ ಕಡಿತವಾಗಲಿದೆ. ಅನುದಾನ ಕಡಿತವಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಜವಾಬ್ದಾರರ ರನ್ನಾಗಿ ಮಾಡಲಾಗುವುದು. ಪಿಪಿಪಿ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಕಾಮಗಾರಿಗಳನ್ನು ಆರಂಭಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ತೋಟಗಾರಿಕಾ ಕ್ಷೇತ್ರ ವಿಸ್ತರಣೆಗೆ ಪ್ರೋತ್ಸಾಹ ನೀಡಬೇಕು. ಜೇನುಕೃಷಿಯ ಆಸಕ್ತರಿಗೆ ತರಬೇತಿ ನೀಡುವ ಮೂಲಕ ಜೇನುಕೃಷಿ ಕಡೆಗೆ ಆಕರ್ಷಿಸಬೇಕು. ಮುಂದಿನ ಬೇಸಿಗೆಯಲ್ಲಿ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ವಿಲೇವಾರಿ ಯನ್ನು ಇನ್ನಷ್ಟು ವ್ಯವಸ್ಥಿತ ಗೊಳಿಸಬೇಕು. ನಗರ ಮತ್ತು ಗ್ರಾಮೀಣ ವಸತಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಎಲ್ಲಾ ಅಭಿವೃದ್ಧಿ ನಿಗಮಗಳು ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಜಿಲ್ಲೆಯ ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶಕ್ಕಾಗಿ ಮೆಟ್ರಿಕ್ ನಂತರದ ವಿದ್ಯಾರ್ಥಿ ಗಳಿಂದ ಹೆಚ್ಚಿನ ಬೇಡಿಕೆಯಿದೆ.
ಆದ್ದರಿಂದ ಹೊಸ ವಿದ್ಯಾರ್ಥಿನಿಲಯಗಳ ಸ್ಥಾಪನೆ ಮತ್ತು ಅವಕಾಶವಿರುವ ಕಡೆ ಸೀಟು ಹೆಚ್ಚಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ಮಾತನಾಡಿ, ಸ್ಮಾರ್ಟ್ ಸಿಟಿಯ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು. ವಾಟ್ ರಸ್ತೆ ನಿರ್ಮಾಣದ 6 ಪ್ಯಾಕೇಜ್ ಗಳು ಮೇ ಅಂತ್ಯದ ಒಳಗಾಗಿ ಪೂರ್ಣಗೊಳ್ಳಲಿದೆ. ನೆಹರು ಕ್ರೀಡಾಂಗಣದಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳು ಈ ತಿಂಗಳಲ್ಲಿ ಪ್ರಾರಂಭವಾಗಲಿದೆ.
ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳ ರೂಪುರೇಷೆಗಳನ್ನು ಆದಷ್ಟು ಬೇಗನೆ ಅಂತಿಮಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಇನ್ನು ಮುಂತಾದವರು ಉಪಸ್ಥಿತರಿದ್ದರು.