ಪ್ರಧಾನಿ ನರೇಂದ್ರ ಮೋದಿ ಅವರು ಲತಾ ದೀನನಾಥ್ ಮಂಗೇಶ್ವರ್ ಪ್ರಶಸ್ತಿ ಗೌರವ ಪಡೆಯುವ ಪ್ರಥಮ ವ್ಯಕ್ತಿಯಾಗಲಿದ್ದಾರೆ.
ಏಪ್ರಿಲ್ 24 ರಂದು ನಡೆಯಲಿರುವ 80ನೇ ವಾರ್ಷಿಕ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೊದಲ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಇತ್ತೀಚಿಗೆ ಮುಂಬೈನಲ್ಲಿ ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಮತ್ತು ಗೌರವಾರ್ಥವಾಗಿ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ.
ಮಾಸ್ಟರ್ ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ ಚಾರಿಟಬಲ್ ಟ್ರಸ್ಟ್, “ನಮ್ಮ ರಾಷ್ಟ್ರ, ಜನರು, ನಮ್ಮ ಸಮಾಜಕ್ಕೆ ಅದ್ಭುತ ಮತ್ತು ಅನುಕರಣೀಯ ಕೊಡುಗೆಗಳನ್ನು ನೀಡಿದ ಓರ್ವ ವ್ಯಕ್ತಿಗೆ ಈ ಪ್ರಶಸ್ತಿಯನ್ನು ಪ್ರತಿ ವರ್ಷ ನೀಡಲಾಗುವುದು” ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ರಾಷ್ಟ್ರ ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆಗಾಗಿ ಪ್ರಧಾನಿ ಮೋದಿ ಮೊದಲಿಗರಾಗಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಮಾಸ್ಟರ್ ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ ಚಾರಿಟಬಲ್ ಟ್ರಸ್ಟ್ ತಿಳಿಸಿದೆ.
ಏಪ್ರಿಲ್ 24 ರಂದು ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ತಂದೆ ಮಾಸ್ಟರ್ ದೀನನಾಥ್ ಮಂಗೇಶ್ಕರ್ ಅವರ 80ನೇ ಪುಣ್ಯತಿಥಿ. ಪ್ರಶಸ್ತಿ ಪ್ರದಾನ ಸಮಾರಂಭ ಮುಂಬೈನ ಷಣ್ಮುಖಾನಂದ ಸಭಾಂಗಣದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.