ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುತ್ತಿದ್ದ ಯುವಕನಿಗೆ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಎಫ್‌ಟಿಎಸ್‌ಟಿ-1ರ ನ್ಯಾಯಾಧೀಶರು ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ.ದಂಡ ವಿಧಿಸಿದ್ದಾರೆ.
ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಡಿ.ರಘು ಶಿಕ್ಷೆಗೆ ಒಳಗಾಗಿದ್ದಾನೆ. ಈತ 2020ರ ಮೇ 6ರಂದು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದನು. ಸಿಐಡಿ ಘಟಕದ ಸೈಬರ್ ಟಿಪ್‌ಲೈನ್ ನೀಡಿದ ಮಾಹಿತಿ ಆಧಾರದ ಮೇಲೆ ಶಿವಮೊಗ್ಗದ ಸಿಇಎನ್ ಠಾಣೆ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.
ತನಿಖಾಧಿಕಾರಿ ಸೈಬರ್ ಠಾಣೆ ಇನ್‌ಸ್ಪೆಕ್ಟರ್ ಕೆ.ಟಿ.ಗುರುರಾಜ್ ಅವರು ರಘು ವಿರುದ್ಧ 2020ರ ಡಿ.24ರಂದು ನ್ಯಾಯಾಲಯಕ್ಕೆ ದೋಷಾರೋಷಣ ಪಟ್ಟಿ ಸಲ್ಲಿಸಿದ್ದರು.
ಈ ಬಗ್ಗೆ ನಿನ್ನೆ (ಶುಕ್ರವಾರ) ವಿಚಾರಣೆ ನಡೆಸಿದ ನ್ಯಾಯಾಧೀಶ ವಿ.ಎಚ್.ದಯಾನಂದ್ ಅವರು ರಘು ಮೇಲಿನ ಆರೋಪಗಳು ಸಾಬೀತಾದ ಬಳಿಕ,ಆತನಿಗೆ 2 ವರ್ಷ ಶಿಕ್ಷೆ ಹಾಗೂ ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸದಾ ಕಾರಾಗೃಹ ಶಿಕ್ಷೆ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.