2023ನೇ ಸಾಲಿನ ಪದ್ಮ ಪ್ರಶಸ್ತಿಗೆ ನಾಮ ನಿರ್ದೇಶನ ಮತ್ತು ಶಿಫಾರಸು ಅರ್ಜಿಗಳನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶವಿದ್ದು ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಮುಂದಿನ ವರ್ಷ ಗಣರಾಜ್ಯೋತ್ಸವ ದಿನ ಘೋಷಿಸಲಾಗುವುದು ಎಂದು ಗೃಹ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಪದ್ಮ ಪ್ರಶಸ್ತಿಗೆ ಹೆಸರುಗಳನ್ನು ಸೂಚಿಸಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಪದ್ಮ ಪ್ರಶಸ್ತಿಗೆ ಹೆಸರು, ಶಿಫಾರಸುಗಳನ್ನು ಆನ್ ಲೈನ್ ಮೂಲಕ ಮಾತ್ರ ಅದರ ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್ ನಲ್ಲಿ ಅಧಿಕೃತ ವೆಬ್ ಸೈಟ್ ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.
ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಪದ್ಮ ವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳು ಒಳಗೊಂಡಿರುತ್ತದೆ.
1954 ರಲ್ಲಿ ಸ್ಥಾಪಿಸಲಾದ ಪದ್ಮ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಪ್ರಶಸ್ತಿಯು ದೇಶದಲ್ಲಿ ಯಾವುದೇ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೆರೆದ ನಾಗರಿಕರನ್ನು ಗುರುತಿಸುವುದಾಗಿರುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆಗಳಂತಹ ಹೀಗೆ ಹಲವು ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.
