ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು.
ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ರಾಜ್ಯದ 13 ಜಲಾಶಯಗಳಲ್ಲಿ 800 ಟಿಎಂಸಿ ನೀರು ಇದ್ದು, ಜಲಾಶಯದಲ್ಲಿ ಹೆಚ್ಚುವರಿ ನೀರನ್ನು ಸಂಗ್ರಹಿಸದೆ ನದಿಗೆ ನೀರು ಬಿಡುವಂತಾಗಲು ಕ್ರಮವಹಿಸಲಾಗಿದೆ. ಹಾಗೆಯೇ ಹೆಚ್ಚಿನ ಮಳೆಯಾಗುತ್ತಿರುವ ಏಳು ಜಿಲ್ಲೆಗಳಲ್ಲಿ ಜಿಲ್ಲಾಡಳಿತ ನಿರಂತರ ಸಂಪರ್ಕ ಸಾಧಿಸಿ ಯಾವುದೇ ರೀತಿಯ ಸಮಸ್ಯೆ ಉದ್ಭವವಾಗದಂತೆ ಗಮನಹರಿಸಲು ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಿಳಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಿದ್ದು, 18 ಜಿಲ್ಲೆಗಳಲ್ಲಿ ವಾಡಿಕೆ ಮಳೆಯಾಗಿದೆ. ಉಳಿದಂತೆ ಇಲ್ಲಿಯ ವರೆಗೆ ಮೂರು ಜಿಲ್ಲೆಗಳಲ್ಲಿ (ಕೊಡಗು, ಹಾವೇರಿ, ಶಿವಮೊಗ್ಗ) ವಾಡಿಕೆಗಿಂತ ಕಡಿಮೆ ಮಳೆಯಾಗಿದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.
ಸದ್ಯ ಇನ್ನೂ ಮೂರು ದಿನಗಳ ಕಾಲ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಪ್ರಾಕೃತಿಕ ವಿಕೋಪದಿಂದ ಸಂಪೂರ್ಣ ಮನೆ ಹಾನಿಯಾದಲ್ಲಿ ಈ ಹಿಂದೆ 95 ಸಾವಿರ ರೂ. ನೀಡಲಾಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ, ಹಾಗೆಯೇ ಭಾಗಶಃ ಮನೆ ಹಾನಿಯಾದಲ್ಲಿ 5 ಸಾವಿರ ರೂ. ದಿಂದ 50 ಸಾವಿರ ರೂ.ಗೆ ಹೆಚ್ಚಿಸಲಾಗುವುದು. ಈ ಸಂಬಂಧ ಕೂಡಲೇ ಸರ್ಕಾರದ ಆದೇಶ ಹೊರಬೀಳಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ರಾಜ್ಯದ ಯಾವ ಭಾಗದಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆ, ಜಾನುವಾರು ಹಾನಿಯಾಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲಾಗುವುದು. ಇದರಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಮಾಡದಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.