ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ಈ ವೇಳೆ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಮನೆಗಳ ಪರಿಶೀಲನೆಯನ್ನು ನಡೆಸಿದರು. ಸಂಪೂರ್ಣ ಹಾಳಾಗಿರುವ ಮನೆಯವರಿಗೆ 10 ಸಾವಿರ ನೆರವನ್ನು ತಕ್ಷಣಕ್ಕೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಅಪಾಯದಲ್ಲಿದ್ದ ಕೆಲವು ಮನೆಗಳನ್ನು ಸ್ಥಳಾಂತರಿಸಲಾಗಿದ್ದು, ಕೆಲವರು ಕಾಳಜಿ ಕೇಂದ್ರದಲ್ಲಿದ್ದಾರೆ. ಇನ್ನು ಕೆಲವರು ಸಂಬಂಧಿಕರ ಮನೆಗಳಲ್ಲಿದ್ದಾರೆ. ಸಂಬಂಧಿಕರ ಮನೆಗಳಲ್ಲಿರುವವರಿಗೂ ಕೂಡ ಅಕ್ಕಿ, ಎಣ್ಣೆ, ಬೇಳೆ, ವಿತರಣೆಯಾಗಬೇಕು ಎಂಬ ಸೂಚನೆ ನೀಡಲಾಗಿದೆ.
ಮುಖ್ಯಮಂತ್ರಿಗಳು ಮಡಿಕೇರಿಯಲ್ಲಿ ಮಳೆಯಿಂದ ಹಾನಿ ಉಂಟಾಗಿರುವ ಕುರಿತು
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕಾಳಜಿ ಕೇಂದ್ರದಿಂದ ಮನೆಗೆ ತೆರಳುವ ಸಂದರ್ಭದಲ್ಲಿಯೂ ಪಡಿತರವನ್ನು ಕೊಟ್ಟು ಕಳುಹಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಟಾಸ್ಕ್ ಫೋರ್ಸ್ ಮಾಡಬೇಕು. ಕೂಡಲೇ ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದಂತೆ ಕಂಟ್ರೋಲ್ ರೂಂನ್ನು ಸ್ಥಾಪಿಸಲು ಆದೇಶಿಸಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಸಾಕಷ್ಟು ಅನುದಾನ ಲಭ್ಯವಿದ್ದು, ಅಗತ್ಯ ಬಿದ್ದರೆ ಇನ್ನಷ್ಟು ಅನುದಾನವನ್ನು ಒದಗಿಸಲಾಗುವುದು ಎಂದರು.
ಮಳೆಯಿಂದ ತೊಂದರೆಗೆ ಒಳಗಾದ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡುವಂತೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್. ಅಶೋಕ, ಶಿಕ್ಷಣ ಸಚಿವ ಬಿ. ಸಿ. ನಾಗೇಶ ಮತ್ತು ಇತರರು ಉಪಸ್ಥಿತರಿದ್ದರು.