ಎನ್‌ಡಿಎ ಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಗೆ ಜುಲೈ 16 ಬಿಜೆಪಿ ಸಂಸದೀಯ ಮಂಡಳಿ ಸಭೆ ಕರೆಯಲಾಗಿದೆ. ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ.
ಈಗಾಗಲೇ ಹಲವು ಹೆಸರುಗಳು ಮುನ್ನಲೆಗೆ ಬಂದಿದ್ದು, ಮಹತ್ವದ ಚರ್ಚೆ ಬಳಿಕ ಉಪರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಹೆಸರು ಘೋಷಿಸುವ ಸಾಧ್ಯತೆ ಇದೆ. ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾಮ ಪತ್ರ ಸಲ್ಲಿಸಲು ಜುಲೈ 19 ಕೊನೆಯ ದಿನಾಂಕವಾಗಿದೆ. ಆದ್ದರಿಂದ, ಇಂದೇ ಉಪ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳಲಿದೆ. ಸದ್ಯ ಉಪರಾಷ್ಟ್ರಪತಿಯಾಗಿರುವ ವೆಂಕಯ್ಯ ನಾಯ್ಡು ಅಧಿಕಾರವದಿ ಆಗಸ್ಟ್ 10ಕ್ಕೆ ಅಂತ್ಯಗೊಳ್ಳಲಿದೆ. ಆಗಸ್ಟ್ 11 ರಂದು ನೂತನ ಉಪ ರಾಷ್ಟ್ರಪತಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಡೆ ವಿಪಕ್ಷಗಳು ಕೂಡ ಶೀಘ್ರದಲ್ಲೇ ಉಪ ರಾಷ್ಟ್ರಪತಿ ಅಭ್ಯರ್ಥಿ ಹೆಸರನ್ನು ಘೋಷಿಸಲಿದೆ.
ಚುನಾವಣಾ ಆಯೋಗ ಜೂನ್ 29ಕ್ಕೆ ಉಪರಾಷ್ಟ್ರಪತಿ ಚುನಾವಣಾ ದಿನಾಂಕ ಘೋಷಿಸಿದೆ. ಇದರ ಬೆನ್ನಲ್ಲೇ ಎನ್‌ಡಿಎ, ಯುಪಿಎ ಕೂಟದಲ್ಲಿ ಬಿರುಸಿನ ಚಟುವಟಿಕೆ ಆರಂಭಗೊಂಡಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆದಿವಾಸಿ ಸಮುದಾಯದ ನಾಯಕಿ ದ್ರೌಪದಿ ಮರ್ಮು ಹೆಸರನ್ನು ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ದ್ರೌಪದಿ ಮುರ್ಮು ವಿರುದ್ಧ ವಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ನಾಮಪತ್ರ ಸಲ್ಲಿಸಿದ್ದಾರೆ.