ಮಹತ್ವದ ರಾಜ್ಯ ಕಾಂಗ್ರೆಸ್ ರಾಜಕೀಯ ವ್ಯವಹಾರಗಳ ಸಮಿತಿ ಸಭೆ ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿತು.
ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ , ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಈಶ್ವರ್ ಖಂಡ್ರೆ, ಧುೃವನಾರಾಯಣ ಪಾಲ್ಗೊಂಡಿದ್ದ ಸಭೆಯಲ್ಲಿ ಸಾಮೂಹಿಕ ನಾಯಕತ್ವದಡಿ ಎಲ್ಲರೂ ಒಗ್ಗೂಡಿ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ರಾಹುಲ್ ಗಾಂಧಿ ಕಿವಿಮಾತು ಹೇಳಿದರು ಎಂದು ಮೂಲಗಳು ತಿಳಿಸಿವೆ.
ಮುಂದಿನ ಮುಖ್ಯಮಂತ್ರಿ ವಿಚಾರ ಯಾರೂ ಮಾತನಾಡುವುದು ಬೇಡ. ಅದು ಬಿಜೆಪಿ ಹಾಗೂ ಜೆಡಿಎಸ್‌ಗೆ ನಾವೇ ಅಸ್ತ್ರ ಕೊಟ್ಟಂತೆ ಆಗುತ್ತದೆ. ಎಲ್ಲರೂ ಹೈಕಮಾಂಡ್ ವಹಿಸಿದ ಜವಾಬ್ದಾರಿ ನಿರ್ವಹಿಸಬೇಕು. ಅನಗತ್ಯ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು ಎಂದು ತಾಕೀತು ಮಾಡಲಾಯಿತು ಎಂದು ಹೇಳಲಾಗಿದೆ.
ಸಭೆಯಲ್ಲಿ ಭಾಗವಹಿಸಿದ್ದವರು ಮುಂದಿನ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ತಮ್ಮದೇ ಆದ ಅಭಿಪ್ರಾಯ ಮತ್ತೆ ಸಲಹೆ ನೀಡಿದರು. ರಾಹುಲ್ ಗಾಂಧಿ ಎಲ್ಲರ ಅಭಿಪ್ರಾಯ ಸಹನೆಯಿಂದ ಅಲಿಸಿದರು ಎಂದು ತಿಳಿದು ಬಂದಿದೆ.