ಸಾರ್ವಜನಿಕರಿಂದ ಕುಂದು ಕೊರತೆ ಅರ್ಜಿಗಳನ್ನು ಸ್ಥಳದಲ್ಲೇ ಸ್ವೀಕರಿಸಿ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮವನ್ನು ಪ್ರತಿ 3ನೇ ಶನಿವಾರದಂದು ಆಯ್ದ ಗ್ರಾಮಗಳಲ್ಲಿ ಆಯೋಜಿಸಲಾಗುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ತಿಳಿಸಿದರು.
‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ’ ಕಾರ್ಯಕ್ರಮದಡಿ ಇಂದು ಭದ್ರಾವತಿ ತಾಲ್ಲೂಕಿನ ಕಸಬಾ ಹೋಬಳಿಯ ಹುಣಸೆಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಹಲವು ಅರ್ಜಿಗಳನ್ನು ಸ್ವೀಕರಿಸಿ ವಿಲೇವಾರಿ ಮಾಡಲಾಗಿದ್ದು, ಇನ್ನೂ ಗ್ರಾಮಸ್ಥರು, ಸುತ್ತಮುತ್ತಲ ಗ್ರಾಮಸ್ಥರಿಂದ ಅರ್ಜಿಗಳನ್ನು ಸ್ವೀಕರಿಸಿ ಪರಿಹಾರೋಪಾಯ ಕುರಿತು ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಎಡಿಸಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ, ಎಸಿ ದೊಡ್ಡಗೌಡರ್, ಭದ್ರಾವತಿ ತಹಶೀಲ್ದಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಜರಿದ್ದರು.