ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ವಿರಳ ಕಾಯಿಲೆಗಳಿಗೂ ಚಿಕಿತ್ಸಾ ವೆಚ್ಚ ಭರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗೆಯೇ, ಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ.
ಈ ಮೂಲಕ ಬಡವರ ಆರೋಗ್ಯ ರಕ್ಷಣೆಗೆ ಹೊಸ ಕೊಡುಗೆಯನ್ನು ಸರ್ಕಾರ ನೀಡಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿ ವಿವಿಧ ಕಾಯಿಲೆಗಳಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತಿದೆ. ಆದರೆ, ಕೆಲ ವಿರಳ ಕಾಯಿಲೆಗಳನ್ನು ಈ ಯೋಜನೆಯಡಿ ಸೇರಿಸಲಾಗಿಲ್ಲ. ಅಲ್ಲದೇ ಇಂತಹ ರೋಗಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಇರುವುದಿಲ್ಲ. ಅಂತಹ ಸಂದರ್ಭದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಿ ಆ ವೆಚ್ಚವನ್ನು ಭರಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ, ಚಿಕಿತ್ಸೆಗಳು ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿದ್ದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್, ಈ ಕುರಿತು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ.