ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ತುಂಗಾ ಮತ್ತು ಭದ್ರಾ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದೆ ಎಂದು ಜಿಲ್ಲಾ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯ ಬಿ. ಜಗದೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಅನುಸೂಚಿತ ಜಾತಿ ಹಾಗೂ ಅನುಸೂಚಿತ ಬುಡಕಟ್ಟುಗಳ ಜಾಗೃತಿ ಮತ್ತು ಉಸ್ತುವಾರಿ (ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ, ಗ್ರಾಮಾಂತರ ಕ್ಷೇತ್ರದಲ್ಲಿ ಎರಡೂ ನದಿಗಳಲ್ಲಿ ಪೊಲೀಸ್ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೂ ಈ ಅಕ್ರಮ ಮರಳು ಗಣಿಗಾರಿಕೆಯಲ್ಲಿ ಶಾಮೀಲಾಗಿದ್ದಾರೆ. ಅಕ್ರಮ ಮರಳು ದಂಧೆ ಹಗಲು ರಾತ್ರಿ ಎನ್ನದೇ ನಡೆಯುತ್ತಿದೆ.
ಕಾನೂನುಬಾಹಿರವಾಗಿ ಜೆಸಿಬಿ ಮತ್ತಿತರೆ ಯಂತ್ರೋಪಕರಣಗಳನ್ನು ಬಳಸಿಕೊಂಡು ಈ ದಂಧೆ ನಡೆಸುತ್ತಿದ್ದು, ಜಿಲ್ಲಾಡಳಿತ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅದೇ ರೀತಿ ಸರ್ಕಾರಿ ಜಾಗಗಳನ್ನು ಕಬಳಿಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಸರ್ಕಾರದ ದನಗಳ ಮುಫತ್ತು, ಖರಾಬು ಜಾಗ, ಮತ್ತಿತರೆ ಸಾರ್ವಜನಿಕ ಉದ್ದೇಶಗಳಿಗೆ ಮೀಸಲಿಟ್ಟ ಜಾಗವನ್ನು ಕಬಳಿಸಲಾಗುತ್ತಿದೆ. ಭದ್ರಾವತಿ ತಾಲ್ಲೂಕಿನ ಮಜ್ಜಿಗೇನಹಳ್ಳಿ ಗ್ರಾಮದಲ್ಲಿ ದನಗಳ ಮುಫತ್ತಿಗೆ ಮೀಸಲಿಟ್ಟಿದ್ದ 10 ಎಕರೆಗೂ ಹೆಚ್ಚುಜಾಗವನ್ನು ಖಾಸಗಿ ವ್ಯಕ್ತಿಗಳು ಸದ್ದಿಲ್ಲದೇ ಒತ್ತುವರಿ ಮಾಡಿಕೊಂಡಿದ್ದಾರೆ.
ದಾಖಲೆಗಳಲ್ಲಿ ದನಗಳ ಮುಫತ್ತು ಎಂದಿದ್ದರೂ ಅಲ್ಲಿ ಜಾಗ ಇಲ್ಲ. ಇದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳ ಸಹಕಾರವೂ ಇದೆ ಎಂದು ಆರೋಪಿಸಿದರು.
ಕೂಡಲೇ ಜಿಲ್ಲಾಧಿಕಾರಿಗಳು ಭದ್ರಾವತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಗ್ರಾಮಠಾಣೆಗೆ, ದನಗಳ ಮುಫತ್ತು, ಸ್ಮಶಾನ ಮತ್ತಿತರೆ ಉದ್ದೇಶಗಳಿಗೆ ಮೀಸಲಿಟ್ಟಿರುವ ಜಾಗಗಳನ್ನು ಸಂರಕ್ಷಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿದರು.
ಕರೆಗಳಲ್ಲಿ ಹೂಳು ತುಂಬಿದ್ದು, ಮಳೆಯಾದಾಗ ಕೆರೆಯಲ್ಲಿ ನೀರು ಸಂಗ್ರಹವಾಗದೇ ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿ ರೈತರ ಬೆಳೆ ನಾಶವಾಗುತ್ತಿದೆ. ಎಲ್ಲ ಕೆರೆಗಳಲ್ಲೂ ಕನಿಷ್ಠ 10-15 ಅಡಿಯಷ್ಟು ಹೂಳು ಸಂಗ್ರಹವಾಗಿದೆ. ಆದ್ದರಿಂದ ಎಲ್ಲ ಕೆರೆಗಳಲ್ಲೂ ಹೂಳು ತೆಗೆಯಲು ಅನುಮತಿ ನೀಡಬೇಕು ಎಂದು ಸಭೆಗೆ ತಿಳಿಸಿದರು.
ಶಿವಮೊಗ್ಗದ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಪ್ರತಿಕ್ರಿಯಿಸಿ, ಈ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.