ಶಿವಮೊಗ್ಗ: ಸಾರ್ವಜನಿಕ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ಜೊತೆಯಲ್ಲಿ ವರ್ತಕರಿಗೆ ಅನುಕೂಲ ಆಗುವ ರೀತಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ವಾಹನ ಸಂಚಾರ ನಿಯಂತ್ರಣದಿಂದ ವರ್ತಕರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು ಹೇಳಿದ್ದಾರೆ.
ಸೋಮವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಸಂಚಾರ ವ್ಯವಸ್ಥೆಯ ಗೊಂದಲಗಳನ್ನು ಪರಿಹರಿಸಿಕೊಡುವಂತೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಭಾರಿ ವಾಹನಗಳ ಸಂಚಾರ ಕುರಿತು ಹಿಂದೆ ಹೊರಡಿಸಿದ್ದ ಆದೇಶವನ್ನೇ ಮಾರ್ಪಡಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಗರ ವ್ಯಾಪ್ತಿಯಲ್ಲಿ ಇರುವ ವರ್ತಕರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ಏನೇ ಗೊಂದಲ ಹಾಗೂ ಸಮಸ್ಯೆಗಳು ಕಂಡುಬಂದಲ್ಲಿ ಇಲಾಖೆ ಗಮನಕ್ಕೆ ತಂದರೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.
ಸರಕು ಸಾಗಾಣಿಕೆ ವಾಹನಗಳ ಸಂಚಾರ ನಿಷೇಧ ಮಾಡುವುದರಿಂದ ಆಗುವ ಸಮಸ್ಯೆಗಳ ಪರಿಹರಿಸಿಕೊಡುವಂತೆ ಮತ್ತು ಸಂಚಾರ ನಿಯಮಗಳ ಗೊಂದಲಗಳನ್ನು ಸರಿಪಡಿಸಲು ಕೋರಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಪದಾಧಿಕಾರಿಗಳು ಸೋಮವಾರ ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಇದೇ ವೇಳೆಯಲ್ಲಿ ಎಲ್ಲ ವರ್ತಕರು ಸಿಸಿ ಕ್ಯಾಮೆರಾ ಅಳವಡಿಸಿಕೊಳ್ಳುವ ಬಗ್ಗೆ ಪೊಲೀಸ್ ಇಲಾಖೆ ಸೂಚಿಸಿದೆ. ಆದರೆ, ಎಲ್ಲ ವರ್ತಕರಿಗೂ ಸಾಧ್ಯವಾಗುವುದಿಲ್ಲ ಎಂಬ ವಿಷಯವನ್ನು ಎಸ್‌ಪಿ ಗಮನಕ್ಕೆ ತರಲಾಯಿತು. ಸಿಸಿ ಕ್ಯಾಮರಾ ಅಳವಡಿಕೆಯಿಂದ ವರ್ತಕರಿಗೆ ಅನುಕೂಲವಾಗುತ್ತದೆ. ಆದ್ದರಿಂದ ಕ್ಯಾಮರಾ ಅಳವಡಿಸುವುದು ಒಳ್ಳೆಯದು ಎಂದರು.
ವರ್ತಕರು ಸಿಸಿ ಕ್ಯಾಮರಾ ಅಳವಡಿಸಲು ಒಂದು ತಿಂಗಳು ಹೆಚ್ಚುವರಿ ಸಮಯ ಕೋರಲಾಗಿದೆ. ಇದಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳು ಸಹ ಸಮ್ಮತಿ ಸೂಚಿಸಿದೆ. ವರ್ತಕರು ಸಹ ಶೀಘ್ರ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವರ್ತಕರಿಗೆ ಮನವಿ ಮಾಡಿದೆ.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್, ಉಪಾಧ್ಯಕ್ಷ ಬಿ.ಗೋಪಿನಾಥ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ನಿರ್ದೇಶಕ ಎಂ.ರಾಜು, ಪ್ರದೀಪ್ ಯಲಿ, ನರೇಂದ್ರ ಇನ್ನು ಮುಂತಾದವರು ಉಪಸ್ಥಿತರಿದ್ದರು.
