Chamber Of Commerce Shivamogga ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ ಮೂಲಸೌಕರ್ಯಕ್ಕೆ ವಿಶೇಷ ಪ್ರಾಮುಖ್ಯತೆ ನೀಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕೊಡುಗೆಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಮಹತ್ತರ ಅಭಿವೃದ್ಧಿ ಆಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಮಹೇಂದ್ರ ನಾಥ ಪಾಂಡೆ ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ “ಶಿವಮೊಗ್ಗ ಜಿಲ್ಲೆಯ ಕೈಗಾರಿಕಾಭಿವೃದ್ಧಿ ಕುರಿತ ಸಂವಾದ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದು, ಶೀಘ್ರದಲ್ಲೇ ಕಾರ್ಯ ಆರಂಭ ಮಾಡಲಿದೆ. ಇದರಿಂದ ಕೈಗಾರಿಕಾ ಉದ್ಯಮಕ್ಕೆ ಅನುಕೂಲ ಆಗಲಿದೆ ಎಂದು ತಿಳಿಸಿದರು.
Chamber Of Commerce Shivamogga ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೇ ಕ್ಷೇತ್ರಕ್ಕೆ ಮಹತ್ತರ ಕೊಡುಗೆಗಳನ್ನು ಕೇಂದ್ರ ಸರ್ಕಾರ ನೀಡಿದ್ದು, ಶಿವಮೊಗ್ಗ ರಾಣೆಬೆನ್ನೂರು ಮಾರ್ಗ, ಶಿವಮೊಗ್ಗ, ಬೆಂಗಳೂರು-ಮುಂಬೈ ಮಾರ್ಗದ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಸದೃಢಗೊಳಿಸುವ ಮೂಲಕ ಕೈಗಾರಿಕೆ ಮತ್ತು ಉದ್ಯಮ ಕ್ಷೇತ್ರಕ್ಕೆ ಪೂರಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ಆರ್ಥಿಕ ವ್ಯವಸ್ಥೆ ಸದೃಢಗೊಳ್ಳುತ್ತಿದ್ದು, ದೇಶದ ಉದ್ಯಮ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಕೇಂದ್ರವಾಗಿ ರೂಪುಗೊಳ್ಳುವುದು ನಿಶ್ಚಿತ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ. ಮುಂದಿನ ವರ್ಷಗಳಲ್ಲಿ ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ನೆರವು ನೀಡಲಿದೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ದೇಶ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸಿದ ಬಿಜೆಪಿ ಸರ್ಕಾರಗಳು ಉದ್ಯಮ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹವನ್ನು ನಿರಂತರವಾಗಿ ನೀಡುತ್ತ ಬಂದಿದ್ದು, ಕೈಗಾರಿಕೋದ್ಯಮಕ್ಕೆ ಸಂಬಂಧಿಸಿದ ಸಮಸ್ಯೆ ಹಾಗೂ ಪರಿಹಾರ ಸಲಹೆಗಳಿದ್ದಲ್ಲಿ ಕೇಂದ್ರ ಸಚಿವರ ಗಮನಕ್ಕೆ ತಂದ ಸಂದರ್ಭಗಳಲ್ಲಿ ಕೂಡಲೇ ಅನುಷ್ಠಾನ ಮಾಡುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡಿದೆ ಎಂದು ಹೇಳಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪಿಸುವ ಸಂಬಂಧ ಸಮಾಲೋಚನೆ ನಡೆದಿದ್ದು, ಶೀಘ್ರವೇ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಅನುಕೂಲವಾಗುವಂತೆ ಕೌಶಲ್ಯ ಅಭಿವೃದ್ಧಿ ಕೇಂದ್ರ ಕೆಲಸ ಮಾಡಲಿದೆ ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲೆಗೆ ಅವಶ್ಯಕತೆ ಇರುವ ರಸ್ತೆ ಸಂಪರ್ಕ, ಜಾಗ, ನೀರಿನ ಸೌಕರ್ಯ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಕೇಂದ್ರ ಸಚಿವರ ಗಮನಕ್ಕೆ ತರಲಾಯಿತು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಬಿ.ಗೋಪಿನಾಥ್, ಪ್ರದೀಪ್ ಎಲಿ, ಮರಿಸ್ವಾಮಿ, ಪರಮೇಶ್ವರ್, ಗಣೇಶ ಅಂಗಡಿ, ರಮೇಶ್ ಹೆಗಡೆ, ಸಂಘದ ನಿರ್ದೇಶಕರು, ಪದಾಧಿಕಾರಿಗಳು, ಮಾಚೇನಹಳ್ಳಿ ಕೈಗಾರಿಕಾ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.