JCI Shivamogga Sahyadri Institute ಮಹಿಳೆಯರು ಆರ್ಥಿಕವಾಗಿ ಸದೃಢರಾಗಲು ಸ್ವಾವಲಂಬಿಗಳಾಗಲು ಸ್ವಯಂ ಉದ್ಯೋಗ ನಡೆಸಬೇಕು. ಕೇವಲ ಅಡುಗೆ ಮನೆಗೆ ಸೀಮಿತರಾಗದೇ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷೆ ಡಾ. ಸುಷ್ಮಾ ಹಿರೇಮಠ್ ಹೇಳಿದರು.
ಶೆಟ್ಟಿಹಳ್ಳಿ ಗ್ರಾಮದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಮಾತ್ಯಂಗಿ ಸಂಜೀವಿನಿ, ಗ್ರಾಮ ಪಂಚಾಯಿತಿ ಒಕ್ಕೂಟ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಹೊಲಿಗೆ ಯಂತ್ರ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಆಧುನಿಕ ಪ್ರಪಂಚದಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಅನೇಕ ಅವಕಾಶಗಳಿವೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಲೇಡಿ ಜೆಸಿ ವಲಯ ನಿರ್ದೇಶಕಿ ಶಾರದಾ ಶೇಷಗಿರಿಗೌಡ ಮಾತನಾಡಿ, ಜೆಸಿಐ ಸಂಸ್ಥೆ ವತಿಯಿಂದ ನಿರಂತರವಾಗಿ ಸಾಮಾಜಿಕ ಕಳಕಳಿ ಕೆಲಸಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಮಹಿಳಾ ಸಬಲೀಕರಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಇಂತಹ ಶಿಬಿರಗಳಿಂದ ಮಹಿಳೆಯರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿದ್ದಾರೆ. ಜೀವನದಲ್ಲಿ ಸಿಗುವ ಅವಕಾಶಗಳ ಸದ್ಭಳಕೆ ಮಾಡಿಕೊಂಡು ಪ್ರಗತಿ ಸಾಧಿಸಬೇಕು ಎಂದು ಸಲಹೆ ನೀಡಿದರು.
ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತವಾಗಿ ಎರಡು ತಿಂಗಳ ಅವಧಿ ಹೊಲಿಗೆ ತರಬೇತಿ ನೀಡಲಾಗುತ್ತಿದೆ. ತರಬೇತಿ ಪಡೆದ ಮಹಿಳೆಯರು ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಜೀವನ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
JCI Shivamogga Sahyadri Institute ವಲಯ ಉಪಾಧ್ಯಕ್ಷ ಹಾಗೂ ರೋಟರಿ ಶಿವಮೊಗ್ಗ ಪೂರ್ವ ನಿಯೋಜಿತ ಅಧ್ಯಕ್ಷ ಸತೀಶ್ ಚಂದ್ರ ಅವರು ಒಕ್ಕೂಟಕ್ಕೆ ಐದು ಹೊಲಿಗೆ ಯಂತ್ರವನ್ನು ದೇಣಿಗೆಯಾಗಿ ನೀಡುವ ಭರವಸೆ ನೀಡಿದರು.
ಒಕ್ಕೂಟದ ಅಧ್ಯಕ್ಷೆ ಗೀತಾ, ಕಾರ್ಯದರ್ಶಿ ಮಾಲತಿ ಹಾಗೂ 50ಕ್ಕೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.