Railway Station in Shivamogga ಶಿವಮೊಗ್ಗ ಜಿಲ್ಲೆಯ ರೈಲ್ವೇ ಅಭಿವೃದ್ಧಿ ಕೆಲಸಗಳಿಗೆ ಸಂಬಂಧಿಸಿ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶಿವಮೊಗ್ಗ ಜಿಲ್ಲೆಯ ರೈಲ್ವೇ ಸಂಪರ್ಕ ಹಾಗೂ ಅಭಿವೃದ್ಧಿ ದೃಷ್ಠಿಯಿಂದ ಮಹತ್ತರ ಕೊಡುಗೆಯಾಗಿದೆ. ಕೇಂದ್ರ ಸರ್ಕಾರ ಹಾಗೂ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಿದೆ.
ಅಮೃತ ಭಾರತ್ ಯೋಜನೆಯಡಿ ಶಿವಮೊಗ್ಗ ಜಿಲ್ಲೆಯ ನಾಲ್ಕು ರೈಲ್ವೇ ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ 100 ಕೋಟಿ ರೂ. ನೀಡಿರುವುದರಿಂದ ತುಂಬಾ ಉಪಯೋಗವಾಗಲಿದೆ. ಜಿಲ್ಲೆಯ ಜನರಿಗೆ ಪ್ರಯೋಜನ ಸಿಗಲಿದೆ. ವಂದೇ ಭಾರತ್ ರೈಲು ಸಂಚಾರ ಕೂಡ ಆರಂಭವಾಗುವುಕ್ಕೆ ಪೂರಕ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವಿನಂತಿ ಮಾಡಿದೆ.
ಕರ್ನಾಟಕ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಅಭಿನಂದನೆಗಳು ಎಂದು ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿರಾರು ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿದೆ. ಕೇಂದ್ರ ಸರ್ಕಾರದ ಅನುದಾನ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಕೆಲಸಗಳು ವೇಗಗತಿಯಲ್ಲಿ ಆಗುವಂತೆ ಕ್ರಮ ವಹಿಸಬೇಕು. ರಾಜ್ಯ ಸರ್ಕಾರವು ಶಿವಮೊಗ್ಗ ಜಿಲ್ಲೆಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕ್ರಮ ವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದಾರೆ.
Railway Station in Shivamogga ವಿಮಾನ ಹಾರಾಟ ಆರಂಭಿಸಲು ಎಲ್ಲ ರೀತಿಯ ಸಿದ್ಧತೆ ನಡೆಸಲಾಗಿದೆ. ಶೀಘ್ರದಲ್ಲೇ ವಿಮಾನ ಹಾರಾಟ ಆರಂಭಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮನವಿ ಮಾಡಿದ್ದಾರೆ.