Gram Panchayat ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮ ಪಂಚಾಯ್ತಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷಗಾದಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಸರಿತಾ ಕೃಷ್ಣಪ್ಪ ಅಧ್ಯಕ್ಷರಾಗಿ ಹಾಗೂ ಎಂ.ಬಿ. ರೇಣುಕಾಪ್ರಸಾದ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.
14 ಸದಸ್ಯರ ಬಲ ಇರುವ ಪಂಚಾಯ್ತಿಯಲ್ಲಿ ಅಧ್ಯಕ್ಷ ಸ್ಥಾನ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಸರಿತಾ ಕೃಷ್ಣಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.
ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಂ.ಬಿ. ರೇಣುಕಾ ಪ್ರಸಾದ್ ೭ ಮತಗಳನ್ನು ಪಡೆದರೆ, ತಿರುಪತಿ ೬ ಮತಗಳ ಪಡೆದರು. ಒಂದು ಮತ ತಿರಸ್ಕಾರಗೊಂಡಿತು.
Gram Panchayat ಚುನಾವಣಾಧಿಕಾರಿಯಾಗಿ ದಂಡಾವತಿ ಜಲಾಶಯ ಯೋಜನಾ ವಿಭಾಗದ ಸಹಾಯಕ ಇಂಜಿನಿಯರ್ ಯು.ಎಸ್. ಸಂಪತ್ ಕುಮಾರ್ ಕಾರ್ಯನಿರ್ವಹಿಸದರು. ಗ್ರಾಪಂ ಪಿಡಿಒ ನಾರಾಯಣಮೂರ್ತಿ ಸಹಕರಿಸಿದರು. ಚುನಾವಣೆಯ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಪಂ ನೂತನ ಅಧ್ಯಕ್ಷೆ ಸರಿತಾ ಕೃಷ್ಣಪ್ಪ ಮಾತನಾಡಿ, ಪಂಚಾಯ್ತಿ ವ್ಯಾಪ್ತಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣ ಕವಾಗಿ ಪ್ರಯತ್ನ ಮಾಡುತ್ತೇನೆ. ಪಂಚಾಯ್ತಿಯ ಸರ್ವ ಸದಸ್ಯರ ಸಹಕಾರದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುವುದು. ತಮ್ಮನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ ಪಕ್ಷದ ಮುಖಂಡರು ಹಾಗೂ ಪಂಚಾಯ್ತಿಯ ಸದಸ್ಯರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಗ್ರಾಪಂ ನೂತನ ಉಪಾಧ್ಯಕ್ಷ ಎಂ.ಬಿ. ರೇಣುಕಾಪ್ರಸಾದ್ ಮಾತನಾಡಿ, ಕ್ಷೇತ್ರದ ಶಾಸಕರು ಹಾಗೂ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಹೆಸರನ್ನು ತರುವ ನಿಟ್ಟಿನಲ್ಲಿ ಗ್ರಾಪಂನಲ್ಲಿ ಕಾರ್ಯನಿರ್ವಹಿಸಲಾಗುವುದು. ಚಂದ್ರಗುತ್ತಿ ಕ್ಷೇತ್ರ ರಾಜ್ಯದಲ್ಲಿ ಗುರುತಿಸಿಕೊಂಡಿದ್ದು, ತಮಗೆ ದೊರೆತಿರುವ ಅಧಿಕಾರವನ್ನು ಪಂಚಾಯ್ತಿಯನ್ನು ತಾಲೂಕಿನಲ್ಲಿಯೇ ಮಾದರಿಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದರು.
ತಾಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಎಚ್. ಗಣಪತಿ ಮಾತನಾಡಿ, ತಾಲೂಕಿನಲ್ಲಿ ಸುಮಾರು ೨೫ ಗ್ರಾಪಂಗಳಲ್ಲಿ ಕಾಂಗ್ರೆಸ್ ಬೆಂಬಲಿತರು ಅಧಿಕಾರದ ಚುಕ್ಕಾಣ ಹಿಡಿಯಲಿದ್ದಾರೆ. ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರು ಸಚಿವರಿದ್ದು, ಅವರ ಸಹಕಾರ ಮತ್ತು ಮಾರ್ಗದರ್ಶನದೊಂದಿಗೆ ಪಂಚಾಯ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ. ರಾಜ್ಯ ಸರ್ಕಾರ ಬಡವರ ಮತ್ತು ಮಹಿಳೆಯರ ಅಭಿವೃದ್ಧಿಗಾಗಿ ಜಾರಿಗೆ ತಂದ ಯೋಜನೆಗಳನ್ನು ಪಂಚಾಯ್ತಿ ಮಟ್ಟದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜೊತೆಗೆ ಶ್ರೀ ಕ್ಷೇತ್ರದಲ್ಲಿ ಅಧಿದೇವತೆ ಶ್ರೀ ರೇಣುಕಾಂಬೆ ನೆಲೆ ನಿಂತು, ಲಕ್ಷಾಂತರ ಭಕ್ತ ಸಮೂಹವಿದೆ. ಶ್ರೀ ಕ್ಷೇತ್ರದ ಅಭಿವೃದ್ಧಿ ಕಡೆಗೂ ಗಮನ ನೀಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಶಿಲ್ಪಾ, ಲಕ್ಷಿö್ಮ ಚಂದ್ರಪ್ಪ, ಎಂ.ಪಿ. ರತ್ನಾಕರ, ಎಸ್.ಕೆ. ರಾಜಶೇಖರ, ಶ್ರೀಮತಿ, ಲಕ್ಷ್ಮೀ ರವಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಜಿಲ್ಲಾ ಉಪಾಧ್ಯಕ್ಷ ಡಾ. ಆರ್. ಶ್ರೀಧರ್ ಹುಲ್ತಿಕೊಪ್ಪ, ಮುಖಂಡರಾದ ಎಚ್.ಗಣಪತಿ, ಎಂ.ಡಿ. ಶೇಖರ್, ಗಣಪತಿ ನಾಯ್ಕ್, ಎನ್.ಜಿ. ನಾಗರಾಜ್, ಸುನೀಲ್ ಗೌಡ, ಪ್ರಭಾಕರ ಶಿಗ್ಗಾ, ಗಣೇಶ್ ಮರಡಿ, ವಿನಾಯಕ ಶೇಟ್, ಪರಮೇಶ್, ನಾಗರಾಜ ಬಸ್ತಿಕೊಪ್ಪ, ಸೇರಿದಂತೆ ಇತರರಿದ್ದರು.