SN Channabasappa ವಿದ್ಯಾರ್ಥಿಗಳು ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಜೀವನ ರೂಪಿಸಿಕೊಳ್ಳುವಲ್ಲಿ ಗುರುಗಳ ಪಾತ್ರ ಮಹತ್ತರ. ಸಮಾಜದ ಪ್ರಗತಿಯಲ್ಲಿ ಪಾಲ್ಗೊಳ್ಳುವ ಪ್ರಜೆಗಳ ನಿರ್ಮಾಣ ಗುರುಗಳಿಂದ ಸಾಧ್ಯ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜಿನ ಕಲಾ ವಿಭಾಗದಲ್ಲಿ ಸಿ ಮತ್ತು ಡಿ ವಿಭಾಗದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಜೀವನದಲ್ಲಿ ಗುರುವಿನ ಮಾರ್ಗದರ್ಶನ ತುಂಬಾ ಮುಖ್ಯ. ಗುರುಗಳು ತೋರಿಸುವ ಸನ್ಮಾರ್ಗದಲ್ಲಿ ಜೀವನ ಮುನ್ನಡೆಸಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದ್ದು, ಎಲ್ಲ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶಗಳಿದ್ದು, ವಿದ್ಯಾಭ್ಯಾಸದ ಜತೆಯಲ್ಲಿ ಎಲ್ಲರೂ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಅ.ನಾ.ವಿಜೇಂದ್ರ ಅವರು 55ನೇ ವಯಸ್ಸಿನಲ್ಲೂ ಪದವಿ ಪಡೆಯುವ ಮುಖಾಂತರ ಉತ್ತಮ ಸಾಧನೆ ಮಾಡಿದ್ದಾರೆ. ಗುರುಗಳ ಮಾರ್ಗದರ್ಶನದಿಂದ ಇಂತಹ ಸಾಧನೆ ಮಾಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ. ಕೆ.ಬಿ.ಧನಂಜಯ, ವಿದ್ಯಾರ್ಥಿಗಳ ಸಾಧನೆಯಿಂದ ಕಾಲೇಜು ಉತ್ತಮ ಹೆಸರು ಗಳಿಸಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಉತ್ತಮ ಭವಿಷ್ಯ ರೂಪಿಸಿಕೊಳ್ಳುವತ್ತ ಈಗಿನ ವಿದ್ಯಾರ್ಥಿಗಳು ಗಮನ ವಹಿಸಬೇಕು ಎಂದು ಹೇಳಿದರು.
SN Channabasappa ಇದೇ ಸಂದರ್ಭದಲ್ಲಿ ಅ.ನಾ.ವಿಜೇಂದ್ರ ಅವರು 55ನೇ ವಯಸ್ಸಿನಲ್ಲಿ ಬಿಎ ಪದವಿ ಪಡೆಯಲು ಸಹಕರಿಸಿದ ಎಲ್ಲ ಗುರುವೃಂದದವರಿಗೆ ಅಭಿನಂದನೆ ಸಲ್ಲಿಸಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಅ.ನಾ.ವಿಜೇಂದ್ರ ಹಾಗೂ ಪ್ರಾಧ್ಯಾಪಕರು ಉಪಸ್ಥಿತರಿದ್ದರು.