Bharat Scouts and Guides ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿ ಒದಗಿಸುವ ಕೆಲಸ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಆಗುತ್ತಿದ್ದು, ಉತ್ತಮ ಸಂಸ್ಕಾರಯುತ ವ್ತಕ್ತಿಗಳಾಗಿ ರೂಪುಗೊಳ್ಳುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ವಲಯ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ವಿಷ್ಣುಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.
ಶಿವಮೊಗ್ಗ ನಗರದಲ್ಲಿರುವ ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಜಿಲ್ಲಾ ಸಂಸ್ಥೆ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಶಿವಮೊಗ್ಗ ವಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಪನ್ಯಾಸಕರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಆರಂಭಿಸಿ ಸ್ಕೌಟ್ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳನ್ನು ಪ್ರೇರೆಪಿಸು ಜತೆಯಲ್ಲಿ ಮನೆ ಮನಗಳನ್ನು ತಲುಪಿಸಲು ಉಪನ್ಯಾಸಕರ ಜವಾಬ್ದಾರಿ ಹೆಚ್ಚಿದೆ. ತರಬೇತಿ ಪಡೆದ ಉಪನ್ಯಾಸಕರು ಕಾಲೇಜುಗಳಲ್ಲಿ ಸ್ಕೌಟ್ ಗೈಡ್ ಬೆಳೆಸಬೇಕು ಎಂದು ತಿಳಿಸಿದ್ದಾರೆ.
ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಉತ್ತಮ ವ್ಯಕ್ತಿತ್ವ, ಕೌಶಲ್ಯ, ಬದುಕಿನ ಮೌಲ್ಯಗಳು ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ಸಮಾಜದ ಸದೃಢ ಬೆಳವಣಿಗೆಯಲ್ಲಿ ಕೊಡುಗೆ ನೀಡಲು ಸಹಕಾರಿ ಆಗುತ್ತದೆ ಎಂದು ಹೇಳಿದ್ದಾರೆ.
“ಕುವೆಂಪು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಕಾಲೇಜುಗಳ ಉಪನ್ಯಾಸಕ, ಉಪನ್ಯಾಸಕಿಯರಿಗೆ ಒಂದು ದಿನದ ರೋವರಿಂಗ್ ಮತ್ತು ರೇಂಜರಿಂಗ್ ಮಾಹಿತಿ ಶಿಬಿರ” ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತಾಡಿದರು .ರಾಜ್ಯ ಉಪಾಧ್ಯಕ್ಷ ಮಹೇಶ್ ಅವರು ಸ್ಕೌಟ್ಸ್ ಮತ್ತು ಗೈಡ್ಸ್ ಬೆಳೆದು ಬಂದ ದಾರಿ ಹಾಗೂ ಕರ್ತವ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪಗೌಡ ನಾಯಕತ್ವದ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.
Bharat Scouts and Guides ಜಿಲ್ಲಾ ಕಾರ್ಯದರ್ಶಿ ಇ.ಪರಮೇಶ್ವರ್, ಗೈಡ್ ಆಯುಕ್ತ ಶಕುಂತಲಾ ಚಂದ್ರಶೇಖರ್, ಕೇಂದ್ರ ಸ್ಥಾನಿಕ ಆಯುಕ್ತ ಕೆ.ರವಿ, ಜಿ.ವಿಜಯ್‌ಕುಮಾರ್, ಎಂ.ಗಣಪತಿ, ಶಿವಶಂಕರ್, ಲತಾ ಮಂಜುನಾಥ್, ರಾಜೇಶ್ ಅವಲಕ್ಕಿ, ವೀರೇಶಪ್ಪ, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಭಾರತಿ ಡಯಾಸ್ ಮತ್ತಿತರರು ಉಪಸ್ಥಿತರಿದ್ದರು.