Chamber Of Commerce ಉದ್ಯೋಗ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಶಿಕ್ಷಣ ಜ್ಞಾನದ ಜತೆಯಲ್ಲಿ ಕೌಶಲ್ಯವು ಅತ್ಯಂತ ಅಗತ್ಯವಾದ ಸಾಧನವಾಗಿದ್ದು, ಕೌಶಲ್ಯ ಕಲಿಕೆಗೂ ವಿದ್ಯಾರ್ಥಿಗಳು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು.
ನೂತನವಾಗಿ ಉದ್ಘಾಟನೆಗೊಂಡಿರುವ ಶಿವಮೊಗ್ಗ ನಾಲೆಡ್ಜ್ ಫೋರಂ ವತಿಯಿಂದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿಶ್ವವಿದ್ಯಾಲಯ ಹಂತದ ಕ್ವಿಜ್ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದಿನ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚರ್ಚೆ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ. ರಾಜ್ಯ, ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ಸು ಗಳಿಸಲು ನೆರವಾಗುತ್ತದೆ. ಇಂತಹ ಸ್ಪರ್ಧೆಗಳು ಮತ್ತು ಕೌಶಲ್ಯಗಳಿಗೆ ಶಿವಮೊಗ್ಗ ಪ್ರಮುಖ ಕೇಂದ್ರವಾಗಿ ಮಾರ್ಪಡಬೇಕು ಎಂದು ತಿಳಿಸಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮಾತನಾಡಿ, ಜಿಲ್ಲಾ ಸಂಘವು ಸ್ಪರ್ಧಾತ್ಮಕ ಕಾರ್ಯಕ್ರಮಗಳಿಗೆ ನಿರಂತರವಾಗಿ ಪ್ರೋತ್ಸಾಹ ನೀಡುತ್ತ ಬಂದಿದ್ದು, ಮುಂದಿನ ದಿನಗಳಲ್ಲಿಯೂ ಕೌಶಲ್ಯ ಯುವ ಸಮೂಹ ಸೃಷ್ಠಿಸಲು ಪೂರಕ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದರು.
ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಕೌಶಲ್ಯಯುಕ್ತ ವಿದ್ಯಾರ್ಥಿಗಳ ರೂಪಿಸಲು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉನ್ನತ ಮಟ್ಟದ ಕೌಶಲ್ಯಾಭಿವೃದ್ದಿ ತರಬೇತಿ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.
Chamber Of Commerce ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿ.ಚೇತನ್ ಮಾತನಾಡಿ, ಕ್ವಿಜ್ ಸ್ಪರ್ಧೆಗಳು ವಿದ್ಯಾರ್ಥಿಗಳ ಜ್ಞಾನ ಉತ್ತಮಗೊಳಿಸುವುದರ ಜೊತೆಗೆ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ನೀಡುತ್ತದೆ. ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಎಜುರೇಟ್ ಕಾಲೇಜಿನ ಪ್ರಾಚಾರ್ಯ ಶಂಕರನಾರಾಯಣ್ ಸ್ವಾಗತಿಸಿದರು.
ಸಹ್ಯಾದ್ರಿ ಕಾಲೇಜಿನ ಪ್ರಾಧ್ಯಾಪಕ ಕೆ.ವಿ.ಗಿರಿಧರ್‌ರವರು ವಂದನಾರ್ಪಣೆ ನಡೆಸಿಕೊಟ್ಟರು. ಹೊಯ್ಸಳ ಕಾಲೇಜಿನ ಪ್ರಾಚಾರ್ಯ ವಿಲಿಯಂ ಡಿಸೋಜ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸವಿತಾ ಮಾಧವ್ ಕಾರ್ಯಕ್ರಮ ನಿರೂಪಿಸಿದರು. 27 ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.