
school anniversary ಪ್ರತಿಯೊಂದು ಮಗುವಿಗೂ ಶಿಕ್ಷಣದ ಜತೆಯಲ್ಲಿ ಸಂಸ್ಕಾರಗಳನ್ನು ಮೌಲ್ಯಗಳನ್ನು ಕಲಿಸಿದಾಗ ಉತ್ತಮ ಜೀವನ ರೂಪಿಸಿಕೊಳ್ಳಲು ಸಹಕಾರಿ ಆಗುತ್ತದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಹೇಳಿದರು.
ನ್ಯಾಮತಿ ಸುರಹೊನ್ನೆಯ ಶಾಂಭವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಆಯೋಜಿಸಿದ್ದ 35ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಉತ್ತಮ ಶಿಕ್ಷಣ ಪಡೆದರೆ ನಮ್ಮ ಬದುಕಿಗೆ ದಾರಿದೀಪವಾಗುತ್ತದೆ. ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂದು ತಿಳಿಸಿದರು.
.
ವಾರ್ಷಿಕೋತ್ಸವಗಳಲ್ಲಿ ಸಂಸ್ಕೃತಿ ಪರಂಪರೆ ಬಿಂಬಿಸುವ ಕೆಲಸ ಆಗಬೇಕು. ಮಕ್ಕಳಲ್ಲಿ ಇರುವ ಪ್ರತಿಭೆ ಅನಾವರಣಕ್ಕೆ ಇಂತಹ ಕಾರ್ಯಕ್ರಮಗಳು ವೇದಿಕೆ ಕಲ್ಪಿಸುತ್ತವೆ. ಮಕ್ಕಳು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಖಿನ್ನತೆ ದೂರಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಸಿಆರ್‌ಪಿ ಆರ್.ಟಿ.ಗಣೇಶ್ ಮಾತನಾಡಿ, ಉತ್ತಮ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಂಸ್ಥೆಯು ಶ್ರಮಿಸುತ್ತಿದೆ. ಶಿಕ್ಷಣ ಕ್ಷೇತ್ರದಲ್ಲಿ ಸಂಸ್ಥೆಯು ಮಹತ್ತರ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.
school anniversary ಸಂಸ್ಥೆಯ ಅಧ್ಯಕ್ಷ, ನಿವೃತ್ತ ವಲಯ ಅರಣ್ಯಾಧಿಕಾರಿ ಕೆ.ಲಿಂಗಪ್ಪ ಮಾತನಾಡಿ, ಮಕ್ಕಳಿಗೆ ಸಂಸ್ಕಾರ ಮೌಲ್ಯ ಹಾಗೂ ಆದರ್ಶ ಗುಣಗಳನ್ನು ಕಲಿಸುವ ಅಗತ್ಯವಿದೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳ ಕಲಿಕಾ ಸಾಮಾರ್ಥ್ಯ, ಬೆಳವಣಿಗೆ ಕುರಿತು ನಿರಂತರ ಗಮನ ವಹಿಸಬೇಕು. ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬದುಕುವಂತೆ ರೂಪಿಸಬೇಕು ಎಂದು ಸಲಹೆ ನೀಡಿದರು.
ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಶಾಂಭವಿ ವಿದ್ಯಾ ಸಂಸ್ಥೆ ಕಾರ್ಯದರ್ಶಿ ದಿವಾಕರ್.ಕೆ.ಕೆ., ಸಹ ಕಾರ್ಯದರ್ಶಿ ಎಂ.ಜಯಪ್ಪ, ಪ್ರಸನ್ನಕುಮಾರ್, ಪ್ರೇಮಮ್ಮ, ಆರ್.ಜಿ.ವಿಜಯಕುಮಾರ್, ರಮೇಶ್, ಮುಖ್ಯಶಿಕ್ಷಕ ರಘುನಾಥ.ಡಿ.ಜಿ., ನರಸಿಂಹಪ್ಪ, ಗೌರವಾಧ್ಯಕ್ಷ ಬಿ.ಮುಕುಂದಪ್ಪ, ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಬಿಂದು ವಿಜಯಕುಮಾರ್ ಮತ್ತಿತರರು ಉಪಸ್ಥಿತರಿದ್ದರು.