Chandragutti Renukamba Temple ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ರೇಣುಕಾಂಬ ದೇವಸ್ಥಾನಕ್ಕೆ ಭರತ ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.
ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.
ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಮುಂತಾದವುಗಳನ್ನು ಆಚರಿಸಿದರು. ಭಕ್ತರು ಸ್ಥಳದಲ್ಲೇ ಒಲೆ ಹೂಡಿ ಕರಿದ ಹೋಳಿಗೆ, ರೊಟ್ಟಿ, ಬುತ್ತಿ ತಯಾರಿಸಿ ರೇಣುಕಾಂಬೆಗೆ ನ್ಯೆವೇದ್ಯ ಅರ್ಪಿಸಿದರು.
Chandragutti Renukamba Temple ನಂತರ ತಮ್ಮ ಬಂಧು ಬಳಗದವರ ಜತೆ ಸಾಮೂಹಿಕ ಭೋಜನ ಮಾಡಿದರು. ಸಂಜೆ ವೇಳೆಗೆ ದೇವಸ್ಥಾನದಿಂದ ಆರಂಭವಾದ ಶ್ರೀದೇವಿಯ ಪಲ್ಲಕ್ಕಿ ಉತ್ಸವ ಮಂಗಳಾರತಿ ಕಟ್ಟೆ, ರಥ ಬೀದಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ವಿವಿಧ ವಾಧ್ಯ ಮೇಳಗಳೊಂದಿಗೆ ವಿಜೃಂಭಣೆಯಿoದ ಜರುಗಿತು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಆವರಣದ ರಥ ಬೀದಿಯಲ್ಲಿ ವ್ಯಾಪಾರ ವಹಿವಾಟು ಜೋರಾಗಿಯೇ ನಡೆಯಿತು. ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಆಡಳಿತ ಸಮಿತಿ ಅಧ್ಯಕ್ಷರು, ಮತ್ತು ಸದಸ್ಯರು ಸೇರಿದಂತೆ ಕಂದಾಯ ಇಲಾಖೆ ಸಿಬ್ಬಂದಿಗಳು ದೇವಸ್ಥಾನದಲ್ಲಿ ಕಾರ್ಯನಿರ್ವಹಿಸಿದರು.