Prajwal Revanna ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದೀಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದಿದೆ.
ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದು, ಈ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಲೋಕಸಭೆಯ ಚುನಾವಣೆಯ ಹೊಸ್ತಿಲಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಹರಿದಾಡಿದ್ದವು. ಆ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದರು. ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಹಾಗೂ ಸಿಐಡಿ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಈ ಕುರಿತು ವಿಶೇಷ ತನಿಖಾ ತಂಡ(ಎಸ್‌ಐಟಿ) ತನಿಖೆ ನಡೆಸುತ್ತಿದೆ.
Prajwal Revanna ಪ್ರಜ್ವಲ್ ವಿರುದ್ಧ ಈಗಾಗಲೇ ಲುಕ್‌ಔಟ್, ಬ್ಲೂ ಕಾರ್ನರ್ ನೋಟಿಸ್ ಜಾರಿಯಾಗಿದ್ದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಪ್ರಜ್ವಲ್ ಬಂಧನಕ್ಕೆ ನ್ಯಾಯಾಲಯದಿಂದ ಬಂಧನದ ವಾರಂಟ್ ಕೂಡ ಜಾರಿ ಆಗಿದೆ. ಪ್ರಜ್ವಲ್ ಎಲ್ಲಿದ್ದಾರೆ ಎಂಬ ಸುಳಿವು ಇದುವರೆಗೂ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿದೆ.