B.S.Yediyurappa ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪೋಕ್ಸೋ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದಲ್ಲದೆ ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಬಾಲಕಿಯ ಸಹೋದರನ ಮನವಿ ಮೇರೆಗೆ ವಕೀಲ ಎಸ್ ಬಾಲನ್ ಅವರು ಜೂನ್ 10ರಂದು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ವಿಚಾರಣೆ ಇನ್ನು ನಡೆಯಬೇಕಿದೆ.
ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದ ಗಂಭೀರತೆ ಪರಿಗಣಿಸಿದ ಸರಕಾರ ಸಿಐಡಿ ತನಿಖೆಗೆ ವಹಿಸಿತ್ತು.
ಈ ಮೊದಲು ಪ್ರಕರಣದ ರದ್ದು ಕೋರಿ ಅರ್ಜಿ ಸಲ್ಲಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಈಗ ಪೊಲೀಸರು ಬಂಧಿಸುವ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಅರ್ಜಿಯಲ್ಲಿ ದೂರಿನಲ್ಲಿ ಯಾವುದೇ ಅಪರಾಧದ ಅಂಶ ಕಂಡುಬರದ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.
B.S.Yediyurappa ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಗತ್ಯ ಬಿದ್ದರೆ ಸಿಐಡಿ ಅಧಿಕಾರಿಗಳು ಬಂಧಿಸಲಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸ್ವಾಭಾವಿಕವಾಗಿ ಯಡಿಯೂರಪ್ಪ ಅವರು ಬಂಧಿಸದಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಜೂನ್ 15ರ ಒಳಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ. ಅಷ್ಟರ ಒಳಗೆ ಯಡಿಯೂರಪ್ಪ ಅವರಿಂದಲೂ ಹೇಳಿಕೆ ಪಡೆಯುತ್ತಾರೆ ಎಂದು ಹೇಳಿದ್ದಾರೆ.