Lok Adalath ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ‘ಲೋಕ್ ಅದಾಲತ್’ ಕಾರ್ಯಕ್ರಮ ಜುಲೈ 13 ರ ಶನಿವಾರದಂದು ಜಿಲ್ಲೆಯಲ್ಲಿ ನಡೆಯಲಿದ್ದು ಕಕ್ಷಿಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಮನವಿ ಮಾಡಿದರು.
Lok Adalath ‘ಲೋಕ ಅದಾಲತ್’ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕ್ ಅದಾಲತ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಪರಿಹಾರ ಪ್ರಕರಣಗಳು, ಚೆಕ್ ಬೌನ್ಸ್, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಕಲಂ 6 ಹಿಂದೂ ವಾರಸು ಕಾಯ್ದೆಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯವು ವಿನೀತ ಶರ್ಮ ವಿರುದ್ಧ ರಾಕೇಶ್ ಶರ್ಮ ಮತ್ತು ಇತರರು ಪ್ರಕರಣದಲ್ಲಿ ದಿನಾಂಕ ೧೧.೦೮.೨೦೨೦ ರಂದು ನೀಡಿರುವ ತೀರ್ಪಿನನ್ವಯ ಹೆಣ್ಣು ಮಕ್ಕಳಿಗೂ ಸಹ ಪಿತ್ರಾರ್ಜಿತ ಆಸ್ತಿಯಲ್ಲಿ ಸಮ ಪಾಲಿಗೆ ಸಂಬಂಧಿಸಿದ್ದು, ವಿಭಜನಾ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳನ್ನು ಗುರುತಿಸಿ, ಸದರಿ ಪ್ರಕರಣಗಳ ಉಭಯ ಕಕ್ಷಿದಾರರನ್ನು ಕರೆಯಿಸಿಕೊಂಡು ಅವರ ಒಪ್ಪಿಗೆಯ ಪ್ರಕಾರ ರಾಜೀ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥ ಮಾಡಲಾಗುವುದು ಎಂದರು.