DC Shivamogga ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಯೋಜನೆಗಳನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳಿಗೆ ಕಾನೂನುಬದ್ಧವಾದ ಎಲ್ಲಾ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಹಾಗೂ ಅವರಿಗೆ ಉದ್ಯೋಗ ಭದ್ರತೆ, ಆರೋಗ್ಯ, ಶಿಕ್ಷಣ ನೆರವು ನೀಡಿ ಸಮಾಜದ ಮುಖ್ಯವಾಹಿನಿಗೆ ಕರೆತರುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು.
ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿ ನಿಷೇಧ ಮತ್ತು ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಹಿಂದಿನ ವರ್ಷಗಳಲ್ಲಿ ಜಿಲ್ಲೆಯ ಹೋಟೆಲ್, ಕೈಗಾರಿಕೆಗಳಲ್ಲಿ ಸರ್ಕಾರದ ಕಾನೂನನ್ನು ಉಲ್ಲಂಘಿಸಿ, ಸಫಾಯಿ ಕರ್ಮಚಾರಿಗಳನ್ನು ಬಳಸಿಕೊಂಡಿರುವ ಬಗ್ಗೆ ಮಾಹಿತಿ ಇದೆ. ಇದು ಪುನಃ ಮರುಕಳಿಸದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳು ಸೂಕ್ಷ್ಮವಾಗಿ ಗಮನಹರಿಸಬೇಕು. ಈ ಪ್ರಕ್ರಿಯೆ ನಿರಂತರವಾಗಿದ್ದು, ತಿಂಗಳಿಗೊಮ್ಮೆ ಜನರಿಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಅರಿವು ಮೂಡಿಸಬೇಕು ಅಲ್ಲದೇ ಸಾರ್ವಜನಿಕರೂ ಕೂಡ ಇಂತಹ ಪ್ರಕರಣಗಳು ಕಂಡುಬಂದಲ್ಲಿ ಸಕಾಲಿಕ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳ ಗಮನಕ್ಕೆ ತರುವಂತೆ ಅವರು ಸೂಚಿಸಿದರು. ಭದ್ರಾವತಿ ತಾಲೂಕಿನ ಗುಡ್ಡದ ನೇರಳೆಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಶಕಗಳ ಹಿಂದೆ ಮಕ್ಕಳಿಂದ ಶೌಚಾಲಯ ಸ್ವಚ್ಚಗೊಳಿಸಿದ ಪ್ರಕರಣದ ಕುರಿತು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖಾಧಿಕಾರಿಗಳು ಪರಿಶೀಲಿಸಿ, ಕೈಗೊಂಡ ಕ್ರಮದ ಕುರಿತು ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಶಿವಮೊಗ್ಗ ಮತ್ತು ಭದ್ರಾವತಿ ಅವಳಿ ನಗರಗಳ ಕೆಲವು ಹೋಟೆಲ್‌ಗಳಲ್ಲಿ ಹಾಗೂ ಭದ್ರಾವತಿಯ ರಂಗಪ್ಪ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೆರೆದ ಚರಂಡಿಗಳಿಗೆ ಮಲ-ಮೂತ್ರ ವಿಸರ್ಜನೆ ಬಿಡುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರುಗಳು ಕೇಳಿ ಬರುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಮಹಾನಗರಪಾಲಿಕೆ ಆಯುಕ್ತರು ಹಾಗೂ ಭದ್ರಾವತಿಯ ಪೌರಾಯುಕ್ತರು ಕೂಡಲೇ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ತಪ್ಪಿತಸ್ಥ ವ್ಯಕ್ತಿ ಅಥವಾ ಸಂಸ್ಥೆಗಳಿಗೆ ದಂಡ ವಿಧಿಸಬೇಕಲ್ಲದೇ ಅನೇಕ ಸೂಚನೆಗಳ ನಂತರವೂ ತಮ್ಮ ವ್ಯವಸ್ಥೆಯನ್ನು ಸರಿಪರಿಸಿಕೊಳ್ಳದೇ ದೊಡ್ಡ ಪ್ರಮಾಣದಲ್ಲಿ ಮುಂದುವರೆಸುತ್ತಿದ್ದಲ್ಲಿ ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು.
DC Shivamogga ಈಗಾಗಲೇ ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕಾವೆಂರ‍್ಸ್ಗಳ ಸಮೀಕ್ಷೆ ನಡೆಸಿದ್ದು, ಸರ್ಕಾರಕ್ಕೆ ವರದಿ ನೀಡಲಾಗಿದೆ ಎಂದ ಅವರು, ದಶಕಗಳ ಹಿಂದೆ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯ ಮ್ಯಾನ್ಯುಯಲ್ ಸ್ಕಾವೆಂಜಿಂಗ್ ಮಾಡುವಾಗ ಮೃತಪಟ್ಟ ಕುಟುಂಬಕ್ಕೆ ಪರಿಹಾರ ದೊರಕದಿರುವುದು ಸಮಿತಿ ಸದಸ್ಯರು ಗಮನಕ್ಕೆ ತಂದಿದ್ದು, ಪರಿಹಾರಧನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ವಿಶ್ವದಲ್ಲೇ ಶಿಕ್ಷಣದಲ್ಲಿ ಅತಿಹೆಚ್ಚು ಪದವಿಗಳಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಶಾಲೆಗೆ ದಾಖಲಾದ ದಿನವಾದ ನವೆಂಬರ್ ೦೭ರಂದು ಪೌರಸೇವಾಕಾರ್ಮಿಕರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
೨೦೨೧-೨೨ನೇ ಸಾಲಿನಲ್ಲಿ ಗುರುತಿಸಲಾದ ಮ್ಯಾನ್ಯುಯಲ್ ಸ್ಕಾವೆಂರ‍್ಸ್ಗಳಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ ಸಹಾಯಧನ ಮಂಜೂರಾತಿಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳು ಬಂದಲ್ಲಿ ಕ್ರಮಕ್ಕೆ ಸೂಚಿಸಲಾಗುವುದು. ಅರ್ಹ ಅರ್ಜಿದಾರರಿಗೆ ಸೌಲಭ್ಯ ಕೊಡುವಲ್ಲಿ ಬ್ಯಾಂಕುಗಳ ವ್ಯವಸ್ಥಾಪಕರಿಂದ ಅನಗತ್ಯ ವಿಳಂಬ ಆಗುತ್ತಿರುವ ಬಗ್ಗೆ ದೂರುಗಳಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಸೂಚಿಸಿದರು. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಶುಲ್ಕ ಭರಿಸಲು ನಗರ ಸ್ಥಳೀಯ ಸಂಸ್ಥೆಗಳ ವಂತಿಕೆ ಇಂದ ಭರಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ಅಂತಹ ವಿದ್ಯಾರ್ಥಿಗಳಿದ್ದಲ್ಲಿ ಮಾಹಿತಿ ನೀಡಿದಲ್ಲಿ ಶುಲ್ಕ ಭರಿಸುವ ಕುರಿತು ಸಂಬಂಧಿಸಿದ ಇಲಾಖಾ ಅಧಿಕಾರಿಗಳ ಗಮನ ಸೆಳೆಯಲಾಗುವುದು ಎಂದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಶ್ರೀಮತಿ ಕವಿತಾಯೋಗಪ್ಪನವರ್, ಸಮಿತಿ ಸದಸ್ಯರಾದ ಚಿನ್ನಯ್ಯ, ಭಾನುಪ್ರಸಾದ್, ಕಾಗಿನಲ್ಲಿ ನಾಗರಾಜ್, ಶ್ರೀಮತಿ ರಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.