Rotary Club Shivamogga ರಸಪ್ರಶ್ನೆ ಕಾರ್ಯಕ್ರಮದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ, ಜ್ಞಾನ ಹಾಗೂ ಕೌಶಲ್ಯ ಸಾಮರ್ಥ್ಯಗಳು ವೃದ್ಧಿಸುತ್ತವೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮೇಲಿನ ಹನಸವಾಡಿಯ ತುಂಗಾ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಸಪ್ರಶ್ನೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಕ್ರಮಗಳ ಜತೆಯಲ್ಲಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸಿಕೊಂಡು ಬರುತ್ತಿದೆ. ಅನೇಕ ಸೇವಾಕೊಡುಗೆಗಳನ್ನು ಸಹ ನಡೆಸುತ್ತಿದೆ ಎಂದರು.
Rotary Club Shivamogga ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯಶಿಕ್ಷಕ ಜೆ.ಡಿ.ಬಸವರಾಜ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲೂ ಸಾಕಷ್ಟು ಪ್ರತಿಭೆ ಇದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಅವರ ಪ್ರತಿಭೆಯನ್ನು ಅನಾವರಣಗೊಳಿಸುತ್ತದೆ ಎಂದು ತಿಳಿಸಿದರು.
ರವಿ ಕೊಟೋಜಿ ಮಾತನಾಡಿ, ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಸಪ್ರಶ್ನೆಗಳು ತುಂಬಾ ಪೂರಕವಾಗಿವೆ. ಮುಂಬರುವ ಪರೀಕ್ಷೆಗಳಲ್ಲಿ ಅವರಿಗೆ ಸಂಪೂರ್ಣ ಸಹಕಾರ ಸಿಗುತ್ತದೆ. ಇಂದಿನ ವಿದ್ಯಾಭ್ಯಾಸದಲ್ಲಿ ಒಂದೊಂದು ಅಂಕಗಳು ಸಹ ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ಇಂತಹ ರಸಪ್ರಶ್ನೆ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ರೋಟರಿ ಕ್ಲಬ್ ಸೆಂಟ್ರಲ್‌ನ ರಮೇಶ್.ಎನ್ ಕಾರ್ಯಕ್ರಮದ ಸಂಯೋಜನೆ ಮಾಡಿದ್ದರು. ಜಿಲ್ಲಾ ಸಾಂಸ್ಕೃತಿಕ ವೈಸ್ ಚೇರ್ಮನ್ ಧರ್ಮೇಂದ್ರ ಸಿಂಗ್ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿದರು. ದೀಪಾ ಶೆಟ್ಟಿ, ಜ್ಯೋತಿ ಶ್ರೀರಾಮ್, ರಾಜಶ್ರೀ ಬಸವರಾಜ್, ಅನ್ ಅಧ್ಯಕ್ಷೆ ಗೀತಾ ಜಗದೀಶ್, ಕಾರ್ಯದರ್ಶಿ ಶುಭಾ ಚಿದಾನಂದ್, ತುಂಗಾ ಪ್ರೌಢಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.