Madhu Bangarappa ಬೇಗುವಳ್ಳಿಯ ನೂತನ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ತಾಪನೆ ನೆರವೇರಿಸಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಮಾತನಾಡಿ, ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಿಸಲು ವಿಶೇಷ ಗಮನ ಹರಿಸುವಂತೆ ಮನವಿ ಮಾಡಿದರು.
ಸರ್ಕಾರಿ ಶಾಲೆಗಳಲ್ಲಿ ಶ್ರೇಷ್ಠ ದರ್ಜೆಯ ಶಿಕ್ಷಕರಿದ್ದಾರೆ. ಈಗಾಗಲೇ ರಾಜ್ಯದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ನೀರು ಮತ್ತು ವಿದ್ಯುತ್ತನ್ನು ಏಕಕಾಲಕ್ಕೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದ ಅವರು, ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನೇಕ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಇಲ್ಲಿಂದ ಶಿಕ್ಷಕರು ಉತ್ತಮ ಫಲಿತಾಂಶ ನೀಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಅಲ್ಲದೆ ಇಲಾಖೆಯು ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚಿಸಿದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯು. ಆರ್. ಅನಂತಮೂರ್ತಿ ಅವರು ವ್ಯಾಸಂಗ ಮಾಡಿದ ಹೆಮ್ಮೆಯ ಶಾಲೆ ಇದಾಗಿರುವುದು ವಿಶೇಷವಾಗಿದೆ. ಈ ಶಾಲೆಯ ಕೊಠಡಿ ಸೇರಿದಂತೆ ಸರ್ವಾoಗಿಣ ಉನ್ನತಿಗೆ ಅಗತ್ಯವಿರುವ ನೆರವನ್ನು ಒದಗಿಸುವುದಾಗಿ ಅವರು ತಿಳಿಸಿದರು.
ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಇರುವ ಶಿಕ್ಷಕರ ಕೊರತೆ ನೀಗಿಸಲು ಮಾನ್ಯ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿರುವುದಾಗಿ ಅವರು ತಿಳಿಸಿದರು.
Madhu Bangarappa ರಾಜ್ಯದ ಪ್ರತಿ ಮನೆಮನೆಯಲ್ಲೂ ಗ್ಯಾರೆಂಟಿ ಯೋಜನೆಗಳ ಪಲಾನುಭವಿಗಳಿರುವುದು ಸಂತಸದ ಸಂಗತಿಯಾಗಿದೆ ಎಂದ ಅವರು, ಅಜೀಮ್ ಪ್ರೇಮ್ ಜಿ ಅವರ ಫೌಂಡೇಶನ್ ಅವರು ನೀಡಿದ 1591ಕೋಟಿ ರು. ಗಳ ಆರ್ಥಿಕ ನೆರವಿನೊಂದಿಗೆ ಶಾಲೆಯ ಎಲ್ಲಾ ಮಕ್ಕಳಿಗೆ ವಾರದ ಆರು ದಿನಗಳ ಕಾಲ ಬಿಸಿ ಊಟದ ಜೊತೆಗೆ ಪೌಷ್ಟಿಕ ಆಹಾರ ಮೊಟ್ಟೆ, ಹಾಲು ವಿತರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರು ಮಾತನಾಡಿ ಸರ್ಕಾರವು ನೂತನವಾಗಿ ಅನುಷ್ಠಾನಗೊಳಿಸಿರುವ ನಮ್ಮ ಶಾಲೆ ನಮ್ಮ ಜವಾಬ್ದಾರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಅಲ್ಲದೆ ಮಂಡಳಿಯಿಂದ ಹಾಗೂ ವೈಯಕ್ತಿಕವಾಗಿ ಆರ್ಥಿಕ ನೆರವನ್ನು ಒದಗಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದರು.
ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಇಂದು ತೀರ್ಥಹಳ್ಳಿ ತಾಲೂಕು ಬೇಗುವಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ ಶಾಲೆಯ ಜಾಗ ಮಂಜೂರಾಗಿರುವ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಆರ್. ಎಂ. ಮಂಜುನಾಥಗೌಡ, ಉಪ ವಿಭಾಗಾಧಿಕಾರಿ ಸತ್ಯನಾರಾಯಣ, ತಹಸೀಲ್ದಾರ್ ರಂಜಿತ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
