Karnataka Lokayukta ಕರ್ನಾಟಕ ಉಪ ಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾರ್ಚ್18ರಿಂದ 21ರವರೆಗೆ ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು ಅಲ್ಲದೇ ಇದೇ ಅವಧಿಯಲ್ಲಿ ವಿವಿಧ ಸಭೆ-ಸಮಾರಂಭ, ತರಬೇತಿ ಕಾರ್ಯಾಗಾರಗಳು, ಸಮಾಲೋಚನಾ ಸಭೆಗಳಲ್ಲಿ ಭಾಗವಹಿಸುವರು.
ಮಾರ್ಚ್ 18 ರಂದು ಸಂಜೆ 7.40ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಮಾರ್ಚ್19ರಂದು ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು. ಅಂದು ಸಂಜೆ 5.30ರಿಂದ 6.30ರವರೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಶಿಕ್ಷಣ ಇಲಾಖೆ, ರೇಷ್ಮೇ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗಾಗಿ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳಿಗಾಗಿ ಏರ್ಪಡಿಸಲಾಗುವ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಾರ್ಚ್20ರಂದು ಬೆಳಿಗ್ಗೆ 9.45 ರಿಂದ 10.45ರವರೆಗೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನಕ್ಕೆ ಭೇಟಿ ನೀಡಿ, ಹಿರಿಯ ವಕೀಲರು ಹಾಗೂ ವಕೀಲರ ಸಂಘದ ಪದಾಧಿಕಾರಿಗಳೊಂದಿಗೆ ಸಾರ್ವಜನಿಕರಿಗೆ ಉತ್ತಮ ಸೇವೆ ಮತ್ತು ಆಡಳಿತ ನೀಡುವಲ್ಲಿ ವಕೀಲರ ಪಾತ್ರ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುವರು.
Karnataka Lokayukta ಬೆಳಿಗ್ಗೆ 11ರಿಂದ 11.30ರವರೆಗೆ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸುವ ಕುರಿತು ದೂರುದಾರರು ಮತ್ತು ಪ್ರತಿವಾದಿಗಳನ್ನು ಉದ್ದೇಶಿಸಿ ಮಾತನಾಡುವರು. ಅಲ್ಲದೇ ಸಾರ್ವಜನಿಕರು ಸಲ್ಲಿಸಿದ ದೂರುಗಳು ಮತ್ತು ಕುಂದು-ಕೊರತೆಗಳ ಪರಿಹಾರಕ್ಕಾಗಿ ಅಗತ್ಯ ಕ್ರಮಕೈಗೊಳ್ಳುವರು.
ಮಾರ್ಚ್21ರಂದು ಬೆಳಿಗ್ಗೆ 9ರಿಂದ 10ರವರೆಗೆ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಪೊಲೀಸ್ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಜಿಲ್ಲೆಯ ಶಿವಮೊಗ್ಗ ನಗರ ಮತ್ತು ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಕಚೇರಿಗಳು ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವರು.
ಅಂದು ಸಂಜೆ 6 ರಿಂದ 7ರವರೆಗೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಮತ್ತು ಕಾನೂನು ಸೇವಾ ಪ್ರಾಧಿಕಾರಗಳ ಪಾತ್ರ ಎಂಬ ವಿಷಯದ ಕುರಿತು ನ್ಯಾಯಾಧೀಶರೊಂದಿಗೆ ಸಂವಾದ ನಡೆಸುವರು.
ಅಂದು ರಾತ್ರಿ 11ಕ್ಕೆ ಶಿವಮೊಗ್ಗದಿಂದ ಬೆಂಗಳೂರಿಗೆ ಹಿಂದಿರುಗುವರು.