DVS College of Arts, Science and Commerce ಯುವ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್‌ಕುಮಾರ್ ಶೆಟ್ಟಿ ಹೇಳಿದರು.
ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಇತಿಹಾಸ, ರಾಜ್ಯಶಾಸ್ತ್ರ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಆಯೋಜಿಸಿದ್ದ “ಸಂಶೋಧನಾ ಕಿರುಪ್ರಬಂಧ ಬರೆಯುವ ಪರಿಕಲ್ಪನೆಗಳು ಮತ್ತು ವಿಧಾನಗಳು” ಕುರಿತ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿ, ವಿವಿಧ ವಿಷಯಗಳಲ್ಲಿ ಸಂಶೋಧನೆ ನಡೆಸಲು ಅವಕಾಶಗಳಿದ್ದು, ವಿದ್ಯಾರ್ಥಿಗಳು ಹೊಸ ಅವಕಾಶಗಳ ಬಗ್ಗೆ ಸದಾ ಪ್ರಯತ್ನ ನಡೆಸಬೇಕು ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್ ಮಾತನಾಡಿ, ವಿದ್ಯಾರ್ಥಿಗಳು ಸಂಶೋಧನೆ ನಡೆಸುವಾಗ ಸ್ಪಷ್ಟ ಮಾಹಿತಿ ಹೊಂದಿರಬೇಕು. ನೈಜ ಅಂಶಗಳನ್ನು ಒಳಗೊಂಡು ಸಂಶೋಧನೆ ಕೈಗೊಳ್ಳಬೇಕು. ವಸ್ತುನಿಷ್ಠವಾಗಿ ಸಂಶೋಧನೆ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
DVS College of Arts, Science and Commerce ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಪ್ರಾಚಾರ್ಯ ಡಾ. ಮಧು.ಜಿ. ಮಾತನಾಡಿ, ದೇಶದ ಪ್ರಗತಿಯಲ್ಲಿ ಸಂಶೋಧನಾ ಕ್ಷೇತ್ರದ ಪಾತ್ರ ಅಪಾರವಾಗಿರುತ್ತದೆ. ದೇಶದ ಪ್ರಗತಿ ಸಾಧಿಸಲು ಸಂಶೋಧನೆಯು ಮೂಲ ವಿಷಯ ಆಗಿರುತ್ತದೆ. ಆದ್ದರಿಂದ ಯುವ ವಿದ್ಯಾರ್ಥಿಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಿ ಮುಂದುವರೆಯಬೇಕು. ನಿಮ್ಮ ಆಸಕ್ತ ಕ್ಷೇತ್ರದಲ್ಲಿ ಸಂಶೋಧನೆಯಲ್ಲಿ ತೊಡಗಿಸಿಕೊಂಡು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ. ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಎನ್.ಕುಮಾರಸ್ವಾಮಿ, ಇತಿಹಾಸ ವಿಭಾಗದ ಮುಖ್ಯಸ್ಥೆ ರೂಪಾ.ಎಂ., ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಆರ್.ಸುರೇಶ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪರಮೇಶ್.ಜಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.