ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಲ್ಲಿನ ವಿಳಂಭ ಧೋರಣೆ ಖಂಡಿಸಿ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮಲೆನಾಡು ರೈತರ ಹಿತರಕ್ಷಣಾ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನೇತೃತ್ವ ವಹಿಸಿದ್ದ ಸಮಿತಿಯ ಸಂಚಾಲಕ ತೀ.ನ. ಶ್ರೀನಿವಾಸ್ ಮಾತನಾಡಿ, ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರಿಗೆ ಹಕ್ಕು ಪತ್ರ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಆದೇಶವಿದ್ದರೂ ಅನುಷ್ಠಾನಗೊಂಡಿಲ್ಲ.
1979ರ ಏಪ್ರೀಲ್ 27ಕ್ಕಿಂತ ಹಿಂದೆ ಅರಣ್ಯ ಭೂಮಿ ಸಾಗುವಳಿ ಮಾಡಿದ ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶ ಮಾಡಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕಾಯ್ದೆಯ ಅನ್ವಯ 1996ರಲ್ಲಿ 43 ಸಾವಿರ ಎಕರೆ ಭೂಮಿಯನ್ನು ಬಿಡುಗಡೆ ಮಾಡಿದೆ. ಆದರೆ, ತಾಲೂಕಿನಲ್ಲಿ 900 ರೈತರು ಅರ್ಜಿಗಳನ್ನು ಸಲ್ಲಿಸಿದ್ದರೂ, ರೈತರಿಗೆ ಕಚೇರಿಗೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ರೈತರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲನೆ ಮಾಡುವಂತೆ ತಾಲೂಕು ಕಚೇರಿಗೆ ಕಳುಹಿಸಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ರೈತರಿಗೆ ಅನಾವಶ್ಯಕವಾಗಿ ತಹಶೀಲ್ದಾರರು ಕಾಲಹರಣ ಮಾಡಿರುವ ಬಗ್ಗೆ ಉಪವಿಭಾಗಾಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕ್ಷೇತ್ರದ ಶಾಸಕರಾದ ಮಧು ಬಂಗಾರಪ್ಪ ಅವರು ರೈತರಿಗೆ ಹಕ್ಕು ಪತ್ರ ನೀಡುವ ಕುರಿತು ಜಿಲ್ಲಾಧಿಕಾರಿಗಳು, ಸಿಸಿಎಫ್ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಸಚಿವರೊಂದಿಗೆ ಸಭೆಗಳನ್ನು ನಡೆಸಿ, ರೈತರಿಗೆ ಹಕ್ಕು ಪತ್ರ ನೀಡುವಂತೆ ಆದೇಶಿಸಿದ್ದಾರೆ.
ಆದರೂ ತಹಶೀಲ್ದಾರರು ಉದಾಸೀನತೆಯಿಂದ ವರ್ತಿಸುತ್ತಿದ್ದಾರೆ. ಇದರಿಂದ ಅರಣ್ಯ ಭೂಮಿಯ ಹಕ್ಕು ಮರೀಚಿಕೆಯಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ನಂತರ ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರಿಗೆ ಮನವಿ ಸಲ್ಲಿಸಿದ ರೈತರು, ಕೂಡಲೇ ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿದರು.
ತಾಲೂಕು ಸಂಚಾಲಕ ಪರಶುರಾಮಪ್ಪ ಶಿಡ್ಡಿಹಳ್ಳಿ, ನಾಗರಾಜ, ವೈ.ಕೆ. ಮಧುಕರ, ಕೆ. ನಾಗರಾಜ, ಶಿವಮೂರ್ತಿ, ಫಕೀರಮ್ಮ, ಗಂಗಮಾಳಮ್ಮ, ಬಸವಣ್ಯಪ್ಪ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
