Rotary Club Shivamogga ಸರ್ಕಾರಿ ಶಾಲೆಗಳಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಬಸವರಾಜ್ ಬಿ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಹಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ವಾಟರ್ ಫಿಲ್ಟರ್ ಕೊಡುಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಕಲುಷಿತ ನೀರು ಕುಡಿಯುವುದನ್ನು ತಪ್ಪಿಸುವ ಉದ್ದೇಶದಿಂದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನೀರಿನ ಶುದ್ಧೀಕರಣ ಯಂತ್ರವನ್ನು ಕೊಡುಗೆಯಾಗಿ ನೀಡುತ್ತಿದೆ.
ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮಕ್ಕಳ ಆರೋಗ್ಯ ರಕ್ಷಣೆಗೆ ರೋಟರಿ ಸಂಸ್ಥೆಯು ಮುಂದಾಗಿದೆ ಎಂದು ತಿಳಿಸಿದರು.
ಜೀವಿತ ಅವಧಿಯಲ್ಲಿ ಮನುಷ್ಯ ಸತ್ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ನಾವು ಮಾಡಿದ ಒಳ್ಳೆಯ ಕೆಲಸಗಳನ್ನು ಜನರು ಸದಾ ನೆನಪಿಸಿಕೊಳ್ಳುತ್ತಾರೆ.
ಸಮಾಜಮುಖಿ ಕಾರ್ಯಗಳಲ್ಲಿ ಎಲ್ಲರೂ ಭಾಗಿಯಾಗಬೇಕು. ರೋಟರಿ ಸಂಸ್ಥೆಯು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವಾಗಿ ವಿಶೇಷವಾಗಿ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದರು.
Rotary Club Shivamogga ನೀರಿನ ಯಂತ್ರವನ್ನು ಎನ್.ರಮೇಶ್ ಮತ್ತು ಜೆ.ಪಿ.ಚಂದ್ರು ಕೊಡುಗೆಯಾಗಿ ನೀಡಿದ್ದಾರೆ. ಹಸಿರು ಸೇನೆಯ ರಾಜ್ಯ ಉಪಾಧ್ಯಕ್ಷ ರಾಜು ಸಭೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ರೋಟರಿ ಕ್ಲಬ್ ವಲಯ ಸೇನಾನಿ ಕಿರಣ್ ಕುಮಾರ್ ಜಿ ಹಾಗೂ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಧರ್ಮೇಂದ್ರ ಸಿಂಗ್, ಸಂತೋಷ್ ಬಿ.ಎ. ಹಾಗೂ ಕಾರ್ಯದರ್ಶಿ ಜಯಶೀಲ ಶೆಟ್ಟಿ ಉಪಸ್ಥಿತರಿದ್ದರು. ಶಾಲೆಯ ವಿದ್ಯಾರ್ಥಿಗಳು, ಹಿಟ್ಟೂರಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
