S.N.Chennabasappa ಯಾವುದೇ ಸರ್ಕಾರಿ ಶಾಲೆಗಳು ಮುಚ್ಚಬಾರದು. ಅದು ಮುಚ್ಚಿದರೆ ಒಂದು ವ್ಯವಸ್ಥೆ ಮುಚ್ಚಿದಂತಾಗುತ್ತದೆ ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಹೇಳಿದರು.
ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬಾಲ ಭವನ ಸಮಿತಿ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಲ್ಲಿ ಆಯೋಜಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2025-26 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಕ್ಷಣ ಇಲಾಖೆಯು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಅನಾವಣಗೊಳಿಸಲು ಅವಕಾಶ ಕಲ್ಪಿಸುತ್ತಿರುವುದು ಉತ್ತಮ ಕಾರ್ಯವಾಗಿದೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳೂ ಕೂಡ ಅತ್ಯಗತ್ಯವಾಗಿದ್ದು, ಸರ್ಕಾರಿ ಶಾಲೆಗಳು ಇಂತಹ ಚಟುವಟಿಕಗಳನ್ನು ಆಯೋಜಿಸುವಲ್ಲಿ ಯಶಸ್ವಿಯಾಗಿವೆ.
ದೇಶ ಕಟ್ಟಲು ಶಿಕ್ಷಣ ವ್ಯವಸ್ಥೆ ಸಮರ್ಪಕವಾಗಿರಬೇಕು. ಶಿಕ್ಷಣ ಎಲ್ಲರಿಗೂ ಅತಿ ಅಗತ್ಯವಾಗಿದ್ದು, ಬಹು ಮುಖ್ಯವಾಗಿ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ದೇಶಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರಕುತ್ತಿದ್ದರೂ ಕಾರಣಾಂತರಗಳಿಂದ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಇದಕ್ಕೇನು ಕಾರಣವೆಂದು ನಾವೆಲ್ಲ ಅವಲೋಕಿಸುವುದು ಅತಿ ಮುಖ್ಯವಾಗಿದೆ ಎಂದರು.
ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಉದ್ಘಾಟಕ ನುಡಿಗಳನ್ನಾಡಿ, ಸ್ವಾತಂತ್ರ್ಯ ನಂತರ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರ ಅನೇಕ ಬದಲಾವಣೆಗಳನ್ನು ತಂದಿದ್ದು, ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಾನ್ಯತೆ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಿಗೆ ಸೌಲಭ್ಯಗಳನ್ನು ನೀಡಿ ಸುಸಜ್ಜಿತ ವ್ಯವಸ್ಥೆ ಕಲ್ಪಿಸಿದೆ. ಇತ್ತೀಚಿಗೆ ಶಿಕ್ಷಣ ವ್ಯಾಪಾರೀಕರಣವಾಗುತ್ತಿದ್ದು ಇದು ಸರ್ಕಾರಿ ಶಾಲೆಗಳ ಮೇಲೆ ಪರಿಣಾಮ ಬೀರುತ್ತಿರುವ ಕಾರಣ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಈ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಬೇಕಿದೆ.
S.N.Chennabasappa ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಚಂದ್ರಭೂಪಾಲ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಹೆಚ್ ಎಂ ಮಧು, ಡಿಡಿಪಿಐ ಮಂಜುನಾಥ್, ಡಯಟ್ ಪ್ರಾಂಶುಪಾಲ ಕೃಷ್ಣಮೂರ್ತಿ, ಶಿವಮೊಗ್ಗ ಬಿಇಓ ರಮೇಶ್, ಜಿಪಿಟಿ ರಾಜ್ಯಾಧ್ಯಕ್ಷ ಮುರಳೀಧರ, ಪ್ರೌಢ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಇತರೆ ಅಧಿಕಾರಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
