B.Y. Vijayendra ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ದೆಹಲಿಯಲ್ಲಿ ನಡೆದ ಸರಣಿ ಸಭೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ಈ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ ನೀಡಿದೆ ಎಂದು ಆರೋಪಿಸಿದರು. ಈ ಬೆಳವಣಿಗೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಪಕ್ಷದ ಅವನತಿಯ ಆರಂಭವಾಗಲಿದೆ ಎಂದು ಹೇಳಿದರು.
ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಯಾರೇ ಸಿಎಂ ಆದರೂ ಈ ಸರ್ಕಾರ ಬಹಳ ದಿನಗಳ ಕಾಲ ಉಳಿಯುವುದಿಲ್ಲ. ಕಾಂಗ್ರೆಸ್ ಪಕ್ಷದ ಆಂತರಿಕ ಕಲಹದಿಂದ ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವುದು ಖಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದರು.
ಸಿದ್ದರಾಮಯ್ಯ ಅನುಭವಿ ಮುಖ್ಯಮಂತ್ರಿ. ವೈಯಕ್ತಿಕವಾಗಿ ಅವರ ವಿರುದ್ಧ ದ್ವೇಷ ಇಲ್ಲ. ಆದರೆ ಅವರ ಆಡಳಿತದಲ್ಲಿ ರಾಜ್ಯದ ಸಾಲದ ಪ್ರಮಾಣ ಮಿತಿಮೀರಿದ್ದು, ಹತ್ತು ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲ ಮಾಡಲಾಗಿದೆ ಎಂದು ಆರೋಪಿಸಿದರು. ಜೊತೆಗೆ ಭ್ರಷ್ಟಾಚಾರ ಮತ್ತು ದೂರಾಡಳಿತ ಮಿತಿ ಮೀರಿದ್ದು, ರಾಜ್ಯದ ಇತಿಹಾಸದಲ್ಲೇ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಂಗ್ರೆಸ್ ಆಡಳಿತದಲ್ಲೇ ನಡೆದಿದೆ ಎಂದು ಟೀಕಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಮೂಡಾ ಪ್ರಕರಣ ಸೇರಿದಂತೆ ಅನೇಕ ಭ್ರಷ್ಟಾಚಾರ ಪ್ರಕರಣಗಳು ಸರ್ಕಾರದ ವಿರುದ್ಧ ಕೇಳಿಬಂದಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಅಂತಿಮ ಹಂತ ತಲುಪಿದೆ ಎಂದು ಹೇಳಿದರು.
ಮುಂದೆ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದಕ್ಕಿಂತ ರಾಜ್ಯದ ಅಭಿವೃದ್ಧಿ ಯಾವ ದಿಕ್ಕಿನಲ್ಲಿ ಸಾಗುತ್ತದೆ ಎಂಬುದು ಮುಖ್ಯ. ಇಂತಹ ಸಂದರ್ಭದಲ್ಲಿ ಬಿಜೆಪಿ ಜನರ ಮುಂದೆ ಹೋಗಿ ತನ್ನ ನಿಲುವು ಸ್ಪಷ್ಟಪಡಿಸಲಿದೆ ಎಂದು ಹೇಳಿದರು.
B.Y. Vijayendra ಉಪಚುನಾವಣೆಯ ಗೆಲುವೇ ಮಾನದಂಡವಾಗಿದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದ ವಿಜಯೇಂದ್ರ, ರಾಜ್ಯಕ್ಕೆ ಭೇಟಿ ನೀಡಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಸಂಘಟನಾತ್ಮಕ ಬಲವರ್ಧನೆ ಕುರಿತು ಚರ್ಚೆ ನಡೆಸಿದ್ದಾರೆ ಎಂದರು. ಶಾಸಕರು ಹಾಗೂ ನಾಯಕರೊಂದಿಗೆ ಸಭೆ ನಡೆಸಿ ಪಕ್ಷದ ಭವಿಷ್ಯದ ತಂತ್ರಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ತಿಳಿಸಿದರು.
ಮುಂಗಾರು ಪೂರ್ವ ಅನಾಹುತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಲಕ್ಷಾಂತರ ಅಡಿಕೆ ಮರಗಳು ಧರೆಗೆ ಉರುಳಿವೆ. ಆದರೆ ಸಚಿವರು ಹಾಗೂ ರಾಜ್ಯ ಸರ್ಕಾರ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಆರೋಪಿಸಿದರು.
ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ರಸಗೊಬ್ಬರದ ಕೊರತೆ ಉಂಟಾಗಿದ್ದು, ಅದರ ಹೊಣೆಯನ್ನು ಕೇಂದ್ರ ಸರ್ಕಾರದ ಮೇಲೆ ಹಾಕುವ ಪ್ರಯತ್ನ ನಡೆಯುತ್ತಿದೆ. ಈ ಎಲ್ಲಾ ವಿಷಯಗಳ ಕುರಿತು ಬಿಜೆಪಿ ಸೂಕ್ತ ಹೋರಾಟ ನಡೆಸಲಿದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
