ಗುಟ್ಕಾ ನಿಷೇಧದ ವಿಚಾರದಲ್ಲಿ ರಾಜಕೀಯ ಮಾಡದೆ ವಾಸ್ತವಾಂಶವನ್ನು ಜನರಿಗೆ ತಿಳಿಸಬೇಕು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.
ಗುಟ್ಕಾದಲ್ಲಿ ನಿಕೋಟಿನ್ ಅಂಶವಿರುವ ಹಿನ್ನೆಲೆಯಲ್ಲಿ ನಿಷೇಧ ಕ್ರಮ ಕೈಗೊಳ್ಳಲಾಗುತ್ತಿದೆ. ಇದು ರೈತರ ವಿರುದ್ಧದ ನಿರ್ಧಾರವಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಗುಟ್ಕಾ ನಿಷೇಧದ ಹೆಸರಲ್ಲಿ ರೈತರಲ್ಲಿ ಅನಗತ್ಯ ಆತಂಕ ಸೃಷ್ಟಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಮಾಜಿ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ನಾಯಕರು ಈ ವಿಚಾರದಲ್ಲಿ ರೈತರನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಮಹಾರಾಷ್ಟ್ರದಲ್ಲೂ ಗುಟ್ಕಾ ನಿಷೇಧವಿದ್ದು, ಅಲ್ಲಿನ ರೈತರಿಗೆ ಯಾವುದೇ ತೊಂದರೆಯಾಗಿಲ್ಲ. ಇದೇ ರೀತಿ ರಾಜ್ಯದಲ್ಲೂ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಗುಟ್ಕಾ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡುವ ಆದೇಶವನ್ನು ಸರ್ಕಾರ ಪಾಲಿಸಲಿದೆ. ರೈತರ ಹಿತಾಸಕ್ತಿಯನ್ನು ಕಾಪಾಡಿಕೊಂಡೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.
