ಗೃಹಜ್ಯೋತಿ ಯೋಜನೆಯಡಿ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಒಟ್ಟು 1,81,805 ಮನೆಗಳ ಮರುಸಮೀಕ್ಷೆ ಪೂರ್ಣಗೊಂಡಿದ್ದು, ಶೇ.99ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಮಧು ಹೆಚ್.ಎಂ. ತಿಳಿಸಿದರು.
ಶಿವಮೊಗ್ಗ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆಯಡಿ ಜುಲೈ ಅಂತ್ಯದವರೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸಹಾಯಧನ ಸಮರ್ಪಕವಾಗಿ ಜಮೆಯಾಗಿರುವುದನ್ನು ಖಚಿತಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಕುರಿತು ಚರ್ಚಿಸಲಾಯಿತು. ಯೋಜನೆಗಳ ತ್ರೈಮಾಸಿಕ ಫಲಾನುಭವಿಗಳ ವಿವರ ಹಾಗೂ ವೆಚ್ಚದ ಮಾಹಿತಿಯನ್ನು ನಿಗದಿತ ಅವಧಿಯಲ್ಲಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಬಸ್ ಚಾಲಕರ ಕೊರತೆ ಅಥವಾ ಇತರೆ ಸಮಸ್ಯೆಗಳು ಎದುರಾದಲ್ಲಿ ತಕ್ಷಣವೇ ಪರ್ಯಾಯ ವ್ಯವಸ್ಥೆ ಮಾಡಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಾರಿಗೆ ಸೇವೆ ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯುವಜನರಿಗೆ ಸರ್ಕಾರದ ಯುವನಿಧಿ ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ತಲುಪಿಸುವ ಉದ್ದೇಶದಿಂದ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ, ಗೃಹಲಕ್ಷ್ಮಿ ಯೋಜನೆಯಡಿ ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೆ ಸಂದಾಯವಾಗಿರುವ ಸಹಾಯಧನವನ್ನು ಸರ್ಕಾರದ ನಿಯಮಾನುಸಾರ ಶೀಘ್ರವಾಗಿ ಮರುಪಾವತಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಸರ್ಕಾರದ ಆದೇಶದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಮಟ್ಟದಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರು ಸದಸ್ಯರನ್ನು ಒಳಗೊಂಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ಹೊಸದಾಗಿ ರಚಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಮಿತಿಯಲ್ಲಿ ಪರಿಶಿಷ್ಟ ಜಾತಿ/ಪಂಗಡದ ಒಬ್ಬರು, ಅಲ್ಪಸಂಖ್ಯಾತರ ಒಬ್ಬರು (ಲಭ್ಯವಿಲ್ಲದಿದ್ದಲ್ಲಿ ಸಾಮಾನ್ಯ ವರ್ಗ), ಇಬ್ಬರು ಮಹಿಳೆಯರು, ಇತರೆ ಹಿಂದುಳಿದ ವರ್ಗದ ಒಬ್ಬರು ಹಾಗೂ ಸಾಮಾನ್ಯ ವರ್ಗದ ಒಬ್ಬರಿಗೆ ಅವಕಾಶ ಕಲ್ಪಿಸುವ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀ ಮಧು ಹೆಚ್.ಎಂ. ಹಾಗೂ ತಾಲ್ಲೂಕು ಪಂಚಾಯಿತಿ ಶಿವಮೊಗ್ಗದ ಕಾರ್ಯನಿರ್ವಾಹಕ ಅಧಿಕಾರಿಗಳ ಪರವಾಗಿ ಸಹಾಯಕ ನಿರ್ದೇಶಕರಾದ (ಗ್ರಾ.ಉ.) ಶ್ರೀ ಸಂತೋಷ್ ಟಿ.ಎಚ್. ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
