ಬೆಳಗಾವಿಯಲ್ಲಿ ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ರೈತರನ್ನು ಹಾಗೂ ರೈತ ಮುಖಂಡರನ್ನು ಬಂಧಿಸಿರುವ ಸರ್ಕಾರದ ಕ್ರಮವನ್ನು ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ತೀವ್ರವಾಗಿ ಖಂಡಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರಲ್ಲಿ ಒಡಕು ಮೂಡಿಸುವ ಮೂಲಕ ಸರ್ಕಾರ ರೈತ ಮುಖಂಡರು ಹಾಗೂ ರೈತರನ್ನು ಬಂಧಿಸಿದೆ. ಇದು ಸರ್ಕಾರದ ಹೇಡಿತನದ ಕ್ರಮವಾಗಿದ್ದು, ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವಿಚಾರವನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ. ಮುಖ್ಯಮಂತ್ರಿಗಳು ಕೂಡಲೇ ಮಧ್ಯಪ್ರವೇಶಿಸಿ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಇದೇ ಬೇಡಿಕೆಯನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಲಾಗುವುದು. ರೈತರಿಗೆ ನ್ಯಾಯಯುತ ಬೆಲೆ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಹೆಚ್.ಆರ್. ಬಸವರಾಜಪ್ಪ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
