ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಪ್ರಮಾಣ ಹೆಚ್ಚಿಸಿರುವ ತೀರ್ಮಾನವನ್ನು ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸುವ ಬಗ್ಗೆ ಪ್ರಧಾನಮಂತ್ರಿಗಳಿಗೆ ಪತ್ರ ಬರೆಯಲಾಗುವುದು. ಪ್ರಧಾನಮಂತ್ರಿಗಳ ಭೇಟಿ ಸಾಧ್ಯವಾದರೆ, ಈ ವಿಚಾರವಾಗಿ ಚರ್ಚೆ ಮಾಡಲಾಗುವುದು.
ಇಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಶಾಸಕರು, ಸಚಿವರು, ವಿವಿಧ ನಿಗಮಗಳ ಅಧ್ಯಕ್ಷರನ್ನು ಒಳಗೊಂಡ ಸಭೆಯಲ್ಲಿ ಮೀಸಲಾತಿ ಹೆಚ್ಚಳ, ಒಳ ಮೀಸಲಾತಿ ವಿಚಾರವಾಗಿ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದ್ದು, ನಮ್ಮ ಅರ್ಜಿ ಸ್ವೀಕೃತಗೊಂಡಿದೆ. ಈ ಕಾನೂನು ಹೋರಾಟದಲ್ಲಿ ಯಾರು ರಾಜ್ಯದ ಪರವಾಗಿ ವಾದ ಮಾಡಬೇಕು ಎಂಬ ಬಗ್ಗೆ ಚರ್ಚಿಸಲಾಯಿತು. ಈ ಪ್ರಕರಣದ ಮೇಲ್ವಿಚಾರಣೆಗೆ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಸಚಿವರಾದ ಕೆ.ಹೆಚ್.ಮುನಿಯಪ್ಪ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ.
ಈ ವಿಚಾರದಲ್ಲಿ ಹಿಂದೆ ಇದ್ದವರನ್ನು ದೂಷಿಸುವುದರಲ್ಲಿ ಅರ್ಥವಿಲ್ಲ. ಬೇರೆ ಕೆಲವು ರಾಜ್ಯಗಳಲ್ಲಿ ಈ ಬಗ್ಗೆ ತೀರ್ಮಾನವಾಗಿದ್ದು, ತಮಿಳುನಾಡಿನಲ್ಲಿ ಶೇ.69ರಷ್ಟು ಮೀಸಲಾತಿ ಇದೆ. ಶೇ.50ರ ಮೀಸಲಾತಿಗಿಂತ ನಾವು ಕೇವಲ ಶೇ.6ರಷ್ಟು ವಿಸ್ತರಣೆಗೆ ಮನವಿ ಮಾಡುತ್ತಿದ್ದೇವೆ. ನಾವು ಈಗಾಗಲೇ ಒಳಮೀಸಲಾತಿ ಸಮಸ್ಯೆಯನ್ನು ಬಗೆಹರಿಸಿದ್ದು, ಮುಂದಿನ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ಯಾವ ರೀತಿ ಕಾರ್ಯಕ್ರಮ ರೂಪಿಸಬೇಕು ಎಂದು ಈ ಸಮುದಾಯಗಳ ನಾಯಕರೊಂದಿಗೆ ಚರ್ಚಿಸಲಾಗಿದೆ. ಈ ವರ್ಗದ ಕಲ್ಯಾಣಕ್ಕೆ ಯಾವ ರೀತಿ ಹೊಸ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ತೀರ್ಮಾನಿಸಲು ವಿಷನ್ ಗ್ರೂಪ್ ಅನ್ನು ರಚಿಸಲಾಗುವುದು.
ಈ ವಿಚಾರಗಳ ಬಗ್ಗೆ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚಿಸಲಾಗಿದ್ದು, ನಾವು ಪ್ರಣಾಳಿಕೆಯಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಿದ್ಧತೆ ಮಾಡಲಾಗುತ್ತಿದೆ. ಇಷ್ಟು ವರ್ಷಗಳ ಕಾಲ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಮೂಲಕ ನೀಡಿರುವ ಅನುದಾನ ಯಾವ ರೀತಿ ಪರಿಣಾಮ ಬೀರಿದೆ ಎಂದು ಅಧ್ಯಯನ ಮಾಡಲು ಪ್ರತಿಷ್ಠಿತ ಸಂಸ್ಥೆಗಳಿಂದ ಸಾಮಾಜಿಕ ಆಡಿಟ್ ಮಾಡಿಸಲು ತೀರ್ಮಾನಿಸಲಾಗಿದೆ.
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಮೂಲಕ 2025-26ನೇ ಸಾಲಿನಲ್ಲಿ ₹42,503 ಕೋಟಿ ಹಾಗೂ ಪ್ರಸಕ್ತ ಸಾಲಿನ ₹44,631 ಕೋಟಿಗಳನ್ನು 34 ಇಲಾಖೆಗಳ 451 ಯೋಜನೆಗಳಿಗೆ ಹಂಚಿಕೆ ಮಾಡಲಾಗಿದೆ. ನಮ್ಮ ಶಾಸಕರು ಹಾಗೂ ಸಚಿವರು ಹೊಸ ಯೋಜನೆಗಳ ಬಗ್ಗೆ ಸಲಹೆ ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿ. ಪರಮೇಶ್ವರ ಅವರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಸೇರಿದಂತೆ ನಮ್ಮ ಎಸ್‌ಸಿ, ಎಸ್‌ಟಿ ಸಮುದಾಯಗಳ ಶಾಸಕರು ಚರ್ಚಿಸಿ, ಏನಾದರೂ ಬದಲಾವಣೆಗಳಿದ್ದರೆ ಆರ್ಥಿಕ ಇಲಾಖೆ ಜತೆಗೂಡಿ ನಮಗೆ ವರದಿ ನೀಡಲಿದ್ದಾರೆ.
ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ₹44,631 ಕೋಟಿ ಸರಿಯಾದ ರೀತಿಯಲ್ಲಿ ತಲುಪಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆಯಾಗಿದ್ದು, ಇದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. 2001ರಿಂದ 2025ರವರೆಗೆ 19,115 ಬ್ಯಾಕ್‌ಲಾಗ್ ಹುದ್ದೆಗಳು ಖಾಲಿ ಇದ್ದು, 17,793 ಹುದ್ದೆಗಳು ಭರ್ತಿಯಾಗಿವೆ. 1,574 ಹುದ್ದೆಗಳು ಬಾಕಿ ಇದ್ದು, ಅವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸಮಾವೇಶ ಮಾಡಲು ಸರ್ಕಾರ ತೀರ್ಮಾನಿಸಿದ್ದು, ನಮ್ಮ ನಾಯಕರು ಈ ಕಾರ್ಯಕ್ರಮ ಎಲ್ಲಿ ನಡೆಯಬೇಕು ಎಂಬುದರ ಬಗ್ಗೆ ನಿರ್ಧರಿಸಲಿದ್ದಾರೆ. ಇದು ಐಕ್ಯತಾ ಸಮಾವೇಶವಾಗಿದ್ದು, ನಾವು ಚುನಾವಣೆಗೂ ಮುನ್ನ ಏನು ಮಾತು ನೀಡಿದ್ದೆವು? ಏನೆಲ್ಲ ಈಡೇರಿಸಿದ್ದೇವೆ? ಎಂಬುದನ್ನು ಜನರಿಗೆ ತಿಳಿಸುವುದು ನಮ್ಮ ಕರ್ತವ್ಯ.
ಕೇಂದ್ರ ಪುರಸ್ಕೃತ ಯೋಜನೆಗಳಡಿ 2025-26ನೇ ಸಾಲಿನಲ್ಲಿ ಬಿಡುಗಡೆ ಮಾಡದೆ ಬಾಕಿ ಉಳಿಸಿರುವ ₹1,937 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗುವುದು. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದ ಕಾರಣ, ರಾಜ್ಯದ ಪಾಲನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಇದರಿಂದಾಗಿ ಹಲವು ಯೋಜನೆಗಳ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದಿದ್ದರೂ, ರಾಜ್ಯದ ಪಾಲಿನ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.
2025-26ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳಡಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿಯಲ್ಲಿ ಒಟ್ಟು ₹10,011 ಕೋಟಿ ಹಂಚಿಕೆಯಾಗಿದ್ದು, ಕೇಂದ್ರದ ಪಾಲು ₹3,497 ಕೋಟಿ, ರಾಜ್ಯದ ಪಾಲು ₹6,514 ಕೋಟಿ ಇದೆ. ಕೇಂದ್ರದ ಪಾಲಿನಲ್ಲಿ ಕೇವಲ ₹1,560 ಕೋಟಿ ಬಿಡುಗಡೆಯಾಗಿದ್ದು, ₹1,937 ಕೋಟಿ ಬಿಡುಗಡೆಯಾಗಿಲ್ಲ. ಬಿಡುಗಡೆಯಾಗಿರುವ ಅನುದಾನದಲ್ಲಿ ₹1,541 ಕೋಟಿ ವೆಚ್ಚ ಮಾಡಲಾಗಿದೆ. ರಾಜ್ಯದ ಪಾಲಿನಲ್ಲಿ ₹5,628 ಕೋಟಿ ಬಿಡುಗಡೆ ಮಾಡಲಾಗಿದ್ದು, ₹5,611 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣದ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
