ಸ್ವಚ್ಛತೆ ಎಂಬುದು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ, ಪ್ರತಿಯೊಬ್ಬರ ಜೀವನದ ದೈನಂದಿನ ಅಭ್ಯಾಸವಾಗಬೇಕು. ಸ್ವಚ್ಛ ಪರಿಸರ ನಿರ್ಮಾಣದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಜವಾಬ್ದಾರಿಯಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಸ್ವಚ್ಛತೆಯ ಮಹತ್ವವನ್ನು ಅರಿತು ತಮ್ಮ ಮನೆ, ಶಾಲೆ, ಕಾಲೇಜು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ಪ್ರಧಾನ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಅವರು ಸ್ವಚ್ಛತಾ ಜಾಗೃತಿ ಸಂದೇಶ ನೀಡಿದರು.
ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಚ್ಛತೆಯೇ ಆರೋಗ್ಯದ ಮೂಲ. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಲೇವಾರಿ ಮಾಡಬೇಕು. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದ್ದು, ಸ್ವಚ್ಛತೆಯ ಸಂಸ್ಕೃತಿಯನ್ನು ಇಂದಿನ ಯುವಪೀಳಿಗೆ ಬೆಳೆಸಿಕೊಳ್ಳಬೇಕು. ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ಮೂಲಕ ಸೇವಾ ಮನೋಭಾವ, ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂಬ ಆಶಯವನ್ನು ವ್ಯಕ್ತಪಡಿಸಿದರು.
ಸ್ವಚ್ಛತೆಯ ಅರಿವು ಪ್ರತಿಯೊಬ್ಬರಲ್ಲೂ ಮೂಡಿದಾಗ ಮಾತ್ರ ಆರೋಗ್ಯಕರ, ಸುಂದರ ಹಾಗೂ ಸ್ವಚ್ಛ ಸಮಾಜ ನಿರ್ಮಾಣ ಸಾಧ್ಯ ಎಂಬ ಸಂದೇಶದೊಂದಿಗೆ ಕಾರ್ಯಕ್ರಮವು ಅರ್ಥಪೂರ್ಣವಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಮಹೇಶ್ವರಪ್ಪ ಟಿ.ಎಸ್., ರೇಂಜರ್ಸ್ ಲೀಡರ್ ಹಾಗೂ ಭೌತಶಾಸ್ತ್ರ ಉಪನ್ಯಾಸಕರಾದ ಗೀತಾ ಕೆ.ಸಿ., ಉಪನ್ಯಾಸಕರಾದ ಸುಧಾ ಜೋಯಿಸ್, ಗಾಯಿತ್ರಿ ಎಂ. ಹಾಗೂ ಗ್ರಂಥಪಾಲಕರಾದ ರಾಧಾಮಣಿ ಎಂ.ಎನ್. ಅವರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಚಂದ್ರಶೇಖರಯ್ಯ, ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ. ವಿಜಯ್ ಕುಮಾರ್ ಹಾಗೂ ಇನ್ನರ್ ವೀಲ್ ಮಾಜಿ ಅಧ್ಯಕ್ಷರಾದ ಬಿಂದು ವಿಜಯ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ದೀಕ್ಷಾ ಕೆ.ಜಿ., ಪ್ರಿಯಾಂಕ ಜಿ., ಸುಮಯ, ಸಿಂಚನ ಹೆಚ್., ಪಾರ್ವತಿ ಎಸ್.ಎಸ್., ಮೇಘನಾ ಟಿ.ಎಂ., ದಿವ್ಯಶ್ರೀ ಕೆ., ಪಚ್ಚಮ್ಮ, ಬಿ.ಬಿ. ಅಮೀನಾ ಖಾನಂ, ಉಷಾ ಎಂ., ಆಯಿಷಾ ಹಾಗೂ ದೀಪ ಅವರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಸ್ವಚ್ಛತೆಯ ಮಹತ್ವವನ್ನು ಸಾರಿದರು.
