U. T. Khader ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಹಾಗೂ ವೇತನ ಹೆಚ್ಚಳದ ಬೇಡಿಕೆ ಕುರಿತು ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಯು.ಟಿ. ಖಾದರ್, ಕಾರ್ಯಕರ್ತೆಯರ ಬಗ್ಗೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್ಎಚ್ಎಂ) ಅಡಿಯಲ್ಲಿ ನೇಮಕಗೊಂಡಿದ್ದು, ಆರಂಭದಲ್ಲಿ ಕೆಲಸಕ್ಕೆ ಅನುಗುಣವಾಗಿ ಪ್ರೋತ್ಸಾಹಧನ ನೀಡುವ ವ್ಯವಸ್ಥೆ ಜಾರಿಯಲ್ಲಿತ್ತು. 2014ರಲ್ಲಿ ಕೇಂದ್ರ ನೀಡುವ ಅನುದಾನಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವೂ ಮ್ಯಾಚಿಂಗ್ ಗ್ರಾಂಟ್ ನೀಡಲು ನಿರ್ಧರಿಸಿತ್ತು. ಪ್ರಸ್ತುತ ರಾಜ್ಯ ಸರ್ಕಾರದಿಂದ 5 ಸಾವಿರ ರೂ. ಹಾಗೂ ಕೇಂದ್ರದ ಅನುದಾನ ಮತ್ತು ಇನ್ಸೆಂಟಿವ್ ಸೇರಿ ಕನಿಷ್ಠ 8 ಸಾವಿರ ರೂ. ದೊರೆಯುತ್ತಿದೆ. ಉತ್ತಮವಾಗಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರಿಗೆ 13ರಿಂದ 16 ಸಾವಿರ ರೂ.ವರೆಗೆ ಪ್ರೋತ್ಸಾಹಧನ ಸಿಗುತ್ತಿದೆ ಎಂದರು.
ಕೆಲಸ ಮಾಡಿದರೂ ಮಾಡದಿದ್ದರೂ ನಿಗದಿತ ಕನಿಷ್ಠ ಮೊತ್ತ ಹಾಗೂ ಹೆಚ್ಚುವರಿ ಪ್ರೋತ್ಸಾಹಧನ ನೀಡಬೇಕೆಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಗಂಟೆಗೂ ಹೆಚ್ಚು ಕಾಲ ಕಾರ್ಯಕರ್ತೆಯರೊಂದಿಗೆ ಚರ್ಚಿಸಿದ್ದು, ಆರ್ಥಿಕ ಇಲಾಖೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಅಧಿವೇಶನ ಮುಕ್ತಾಯದ ವೇಳೆಗೆ ಸಿಹಿ ಸುದ್ದಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಡಿಸೆಂಬರ್ 12ರಂದು ಅಧಿವೇಶನ ಮುಕ್ತಾಯಗೊಳ್ಳಲಿದ್ದು, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಕಾರ್ಯಕರ್ತೆಯರು ಕೆಲಸಕ್ಕೆ ಮರಳಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಈಗಲೇ ಅಂತಿಮ ನಿರ್ಧಾರ ಪ್ರಕಟಿಸಲು ಸಾಧ್ಯವಿಲ್ಲ. ಚರ್ಚೆಯ ಹಂತದಲ್ಲಿ ಹಲವು ವಿಚಾರಗಳು ಪ್ರಸ್ತಾಪವಾಗುತ್ತವೆ. ಹಠ ಹಿಡಿದು ತಕ್ಷಣವೇ ಲಿಖಿತ ಭರವಸೆ ನೀಡುವಂತೆ ಒತ್ತಾಯಿಸುವುದು ಸರಿಯಲ್ಲ. ಅವರ ನೈತಿಕ ಹಕ್ಕುಗಳನ್ನು ಗೌರವಿಸಲು ಸರ್ಕಾರ ಸಹಕರಿಸಲಿದೆ. ಐದು ಗ್ಯಾರಂಟಿ ಯೋಜನೆಗಳಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಆರನೇ ಗ್ಯಾರಂಟಿ ಬಗ್ಗೆಯೂ ಸರ್ಕಾರ ಮುಂದಿನ ದಿನಗಳಲ್ಲಿ ಆಲೋಚಿಸಲಿದೆ ಎಂದರು.
ಕೇಂದ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಬಾಕಿ ಅನುದಾನ ನೀಡುವ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ ಸಚಿವರು, ಈ ಸಂಬಂಧ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದು, ದೆಹಲಿಗೆ ತೆರಳಿದ ಸಂದರ್ಭದಲ್ಲಿ ಭೇಟಿ ಮಾಡಿ ಚರ್ಚಿಸುವುದಾಗಿ ಹೇಳಿದರು.
ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳುವ ಸಂಸ್ಥೆಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು. ಸಿಬ್ಬಂದಿಗೆ ಸಕಾಲದಲ್ಲಿ ವೇತನ ನೀಡದ ಹಾಗೂ ಮೋಸ ಮಾಡುವ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸುವುದರ ಜೊತೆಗೆ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಗ್ರೂಪ್ ಡಿ ಸಿಬ್ಬಂದಿಗೆ ತಿಂಗಳ ವೇತನ ಸಿಗದಿದ್ದರೆ ತೀವ್ರ ತೊಂದರೆಯಾಗುತ್ತದೆ ಎಂದು ಹೇಳಿದರು.
U. T. Khader ಮಂಗನ ಕಾಯಿಲೆ ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದ್ದು, ಎನ್ಪಿಆರ್ ಪ್ರಕ್ರಿಯೆ ನಡೆದಿದೆ. ಡಿಸೆಂಬರ್ ಒಳಗೆ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ಐಸಿಎಂಆರ್ ತಿಳಿಸಿದೆ. ಈ ಕುರಿತು ಮತ್ತೊಮ್ಮೆ ಮಾತನಾಡುವುದಾಗಿ ತಿಳಿಸಿದರು.
ಖಾಸಗಿ ಆಸ್ಪತ್ರೆಗಳು ಚಿಕಿತ್ಸಾ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರಕಟಿಸಬೇಕು. ದರಪಟ್ಟಿ ಪ್ರಕಟಿಸದ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಟೆಂಡರ್ ಪ್ರಕ್ರಿಯೆ ವಿಳಂಬದಿಂದ ಕೆಲವೆಡೆ ಔಷಧ ಕೊರತೆ ಉಂಟಾಗಿದ್ದು, ರೋಗಿಗಳಿಗೆ ತೊಂದರೆಯಾಗದಂತೆ ಎಬಿಆರ್ಕೆ ಯೋಜನೆಯಡಿ ಔಷಧ ಖರೀದಿಸಲು ಸೂಚಿಸಲಾಗಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕನಿಷ್ಠ 10 ವಯಲ್ಸ್ ಹಾಗೂ ತಾಲೂಕು ಮಟ್ಟದಲ್ಲಿ 30 ವಯಲ್ಸ್ ಹಾವು ಕಡಿತದ ಔಷಧ ಲಭ್ಯವಿರಬೇಕು. ಜಿಲ್ಲಾ ವೇರ್ಹೌಸ್ಗಳಲ್ಲಿಯೂ ಸಾಕಷ್ಟು ದಾಸ್ತಾನು ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಶಿವಮೊಗ್ಗದಲ್ಲಿ ಈ ಹಿಂದೆ ಇದ್ದ ಜಿಲ್ಲಾಸ್ಪತ್ರೆಯನ್ನು ವೈದ್ಯಕೀಯ ಕಾಲೇಜಿಗೆ ಬಿಟ್ಟುಕೊಡಲಾಗಿದ್ದು, ಹೊಸ ಜಿಲ್ಲಾ ಮಟ್ಟದ ಆಸ್ಪತ್ರೆಯನ್ನು ಎಲ್ಲಿ ನಿರ್ಮಿಸಬೇಕು ಎಂಬುದರ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ನಕಲಿ ವೈದ್ಯರಿಗೆ ಅವಕಾಶವಿಲ್ಲ. ನಕಲಿ ವೈದ್ಯರು ಸ್ವಯಂಪ್ರೇರಿತವಾಗಿ ತಮ್ಮ ಚಟುವಟಿಕೆ ನಿಲ್ಲಿಸಿ ಊರುಗಳಿಗೆ ತೆರಳಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಜರುಗಿಸಲಾಗುವುದು. ಈ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಆಯುಷ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಆಯುರ್ವೇದ ವೈದ್ಯರು ನಕಲಿ ವೈದ್ಯರಲ್ಲ. ಆಯಾ ವೈದ್ಯಕೀಯ ಪದ್ಧತಿಯ ವ್ಯಾಪ್ತಿ ಹಾಗೂ ಮಾರ್ಗಸೂಚಿಯೊಳಗೆ ತರಬೇತಿ ಪಡೆದು ಕಾರ್ಯನಿರ್ವಹಿಸಬೇಕು. ತಮ್ಮ ವ್ಯಾಪ್ತಿ ಮೀರಿ ಇತರ ವೈದ್ಯಕೀಯ ವಿಭಾಗಗಳಿಗೆ ತೊಂದರೆ ನೀಡಬಾರದು ಎಂದು ಎಚ್ಚರಿಕೆ ನೀಡಿದರು.
