ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಶೈಕ್ಷಣಿಕ ಗುಣಮಟ್ಟ ಮತ್ತು ಮೂಲಸೌಕರ್ಯವನ್ನು ಸುಧಾರಿಸಲು ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಶಾಲೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನಗಳನ್ನು ಸಿ.ಎ. ನಿವೇಶನಗಳ ಮೂಲಕ ಗುರುತಿಸುವಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಖಾತೆ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚಿಸಿದರು.
ಅವರು ಶಿವಮೊಗ್ಗ ಜಿಲ್ಲಾ ಪಂಚಾಯಿತಿಯ ಅಬ್ದುಲ್‌ನಜೀರ್‌ಸಾಬ್‌ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪೂರೈಸುವ ಸಮವಸ್ತ್ರ, ಶೂ, ಸಾಕ್ಸ್ ಮತ್ತು ಶಾಲಾ ಬ್ಯಾಗ್‌ಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ವಿತರಣೆಗೂ ಮುನ್ನ ಅಧಿಕಾರಿಗಳು ಅವುಗಳನ್ನು ಪರಿಶೀಲಿಸಬೇಕು. ಗುಣಮಟ್ಟ ತೃಪ್ತಿಕರವಾಗಿದ್ದರೆ ಮಾತ್ರ ವಿದ್ಯಾರ್ಥಿಗಳಿಗೆ ವಿತರಿಸಬೇಕು. ಕಳಪೆ ವಸ್ತುಗಳನ್ನು ಹಿಂದಿರುಗಿಸುವುದರ ಜೊತೆಗೆ ಅವುಗಳನ್ನು ಸರಬರಾಜು ಮಾಡಿದ ಟೆಂಡರ್‌ದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಅಲ್ಪಸಂಖ್ಯಾತರ ಶಾಲೆಗಳಲ್ಲಿ ಕಂಡುಬರುವ ಸಾಮಾನ್ಯ ಹಾಗೂ ಗಂಭೀರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಾಗುವುದು. ಶಾಲೆಗಳಲ್ಲಿನ ಸಮಸ್ಯೆಗಳು, ಅಗತ್ಯ ಅನುದಾನ ಹಾಗೂ ಕೈಗೊಳ್ಳಬೇಕಾದ ಸುಧಾರಣಾ ಕ್ರಮಗಳ ಕುರಿತು ಇಲಾಖಾ ಆಯುಕ್ತರಿಗೆ ಸಮಗ್ರ ಪ್ರಸ್ತಾವನೆ ಸಲ್ಲಿಸುವಂತಯೂ ಸೂಚಿಸಿದರು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಆದ್ಯತೆ ನೀಡಬೇಕು. ಶಾಲೆಗಳಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸುವುದರೊಂದಿಗೆ ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಬೇಕು. ಶಿಸ್ತು, ನೈತಿಕ ಮೌಲ್ಯಗಳು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ಕಾರ್ಯಕ್ರಮಗಳನ್ನು ರೂಪಿಸಬೇಕು. ಉತ್ತಮ ಗುಣಮಟ್ಟದ ಬ್ಯಾಂಡ್ ಸೆಟ್‌ಗಳನ್ನು ಹೊಂದುವ ಮೂಲಕ ಶಾಲೆಗಳನ್ನು ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಮಾದರಿ ಶಿಕ್ಷಣ ಸಂಸ್ಥೆಗಳನ್ನಾಗಿ ರೂಪಿಸಲು ಶಿಕ್ಷಕರು ಶ್ರಮಿಸಬೇಕು ಎಂದರು.
ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಶಾಲೆಗಳಲ್ಲಿ ಕಬಡ್ಡಿ, ಖೋ-ಖೋ, ವಾಲಿಬಾಲ್ ಮತ್ತು ಫುಟ್‌ಬಾಲ್ ಕ್ರೀಡೆಗಳಿಗೆ ಅಗತ್ಯ ಮೈದಾನ ಹಾಗೂ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು. ಅಲ್ಪಸಂಖ್ಯಾತರ ಶಾಲೆಗಳ ಶಿಕ್ಷಕರಿಗಾಗಿ ಅಂತರ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸುವ ಚಿಂತನೆಯೂ ಇದೆ ಎಂದು ತಿಳಿಸಿದರು.
ರಾಜ್ಯದ ಅಲ್ಪಸಂಖ್ಯಾತರ ಶಾಲೆಗಳ ಶೈಕ್ಷಣಿಕ ಗುಣಮಟ್ಟ, ವಸತಿ ಸೌಲಭ್ಯ, ಶಿಕ್ಷಕರ ಲಭ್ಯತೆ ಹಾಗೂ ಇತರೆ ಮೂಲಸೌಕರ್ಯಗಳ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಲು ಖಾಸಗಿ ಸಂಸ್ಥೆಯೊಂದಕ್ಕೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ವರದಿಯ ಆಧಾರದ ಮೇಲೆ ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಅಗತ್ಯ ನೇಮಕಾತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅಲ್ಪಸಂಖ್ಯಾತ ಸಮುದಾಯದ ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣವು ಕುಟುಂಬದ ಪ್ರಗತಿ ಹಾಗೂ ಸಮಾಜದ ಉನ್ನತಿಗೆ ಪ್ರಮುಖ ಸಾಧನವಾಗಿದೆ. ಶಿಕ್ಷಣ ಪಡೆದವರು ಸಂಘಟಿತರಾಗಿ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಶಿಕಾರಿಪುರ ತಾಲೂಕಿನ ಉಡುಗುಣಿಯಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತರ ವಸತಿ ಶಾಲೆಯ ಕಟ್ಟಡ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಶೀಘ್ರದಲ್ಲೇ ಉದ್ಘಾಟನೆಗೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಲಾ ಮಕ್ಕಳ ದಾಖಲಾತಿ, ಶೈಕ್ಷಣಿಕ ಫಲಿತಾಂಶ, ವಸತಿ ಶಾಲೆಗಳಲ್ಲಿನ ಊಟೋಪಹಾರದ ಗುಣಮಟ್ಟ, ಕಟ್ಟಡಗಳ ಸ್ಥಿತಿಗತಿ ಹಾಗೂ ಶಿಕ್ಷಕರ ಕೊರತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್‌ಬಾನು, ಜಿಲ್ಲಾಧಿಕಾರಿ ಪ್ರಕಾಶ್ ಟಿ.ಜಿ. ನಿಟ್ಟಾಲಿ, ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನಗೌಡ, ಸೂಡಾ ಅಧ್ಯಕ್ಷ ಮಧುಸೂದನ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮುಸ್ಲಿಂ ಸಮುದಾಯದ ಮುಖಂಡರು ಸಭೆಯಲ್ಲಿ ಉಪಸ್ಥಿತರಿದ್ದರು.
