ಸ್ವಯಂ ಉದ್ಯೋಗ ಕೈಗೊಳ್ಳುವ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಯುವ ಜನರಿಗೆ ಸರ್ಕಾರದಿಂದ ನೀಡುತ್ತಿದ್ದ ಸಹಾಯಧನದ ಮೊತ್ತವನ್ನು ₹ 50 ಸಾವಿರದಿಂದ ₹ 1ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು,
ರಾಜಕೀಯ ಸ್ವಾರ್ಥ ಸಾಧನೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರನ್ನು ದುರ್ಬಳಕೆ ಮಾಡಿಕೊಳ್ಳುವುದು ಅಪರಾಧ. ಶೋಷಿತ ಸಮುದಾಯಗಳು ಮತ್ತು ಮಹಿಳೆಯರು ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಪಡೆಯಬೇಕು ಎಂಬುದು ಅಂಬೇಡ್ಕರ್ ನಿಲುವಾಗಿತ್ತು. ಅದಕ್ಕೆ ಪೂರಕವಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತಿದೆ. ಸ್ತ್ರೀ ಶಕ್ತಿ ಸಂಘಗಳಿಗೆ ನೆರವು ನೀಡಲು ಆಯಂಕರ್ ಬ್ಯಾಂಕ್ ಸ್ಥಾಪಿಸಲಾಗುತ್ತಿದೆ. ಅಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಎಂದರು.
ಪ್ರತಿ ವರ್ಷ 10 ಸಾವಿರ ಯುವಜನರಿಗೆ ಸ್ವಯಂ ಉದ್ಯೋಗಕ್ಕೆ ನೆರವು ನೀಡಲಾಗುತ್ತಿದೆ. ಈ ಯೋಜನೆಯಡಿ ಯೋಜನೆಗೆ ಬ್ಯಾಂಕ್‌ಗಳ ಮೂಲಕ ಒದಗಿಸುತ್ತಿರುವ ಸಾಲದ ಮೊತ್ತವನ್ನೂ ಹೆಚ್ಚಳ ಮಾಡಲಾಗುವುದು.ಅಂಬೇಡ್ಕರ್ ಹೆಸರಿನಲ್ಲಿ 100 ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಐವರಿಗೆ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.
139 ಪೌರ ಕಾರ್ಮಿಕರನ್ನು ಗೌರವಿಸಲಾಯಿತು.