ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೋವಿಡ್ ವೈರಸ್ ನ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಮತ್ತು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕು ಹೆಚ್ಚಾದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ.
ರಾಜ್ಯದ ಗಡಿ ಭಾಗಗಳ ಆದಂತಹ ಕೇರಳ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಕೈಗೊಂಡಿದೆ. ಆಯಾ ಜಿಲ್ಲೆಗಳ ಡಿಸಿಗಳು ‘ನೋ ವ್ಯಾಕ್ಸಿನ್ ನೋ ಎಂಟ್ರಿ’ ನಿಯಮವನ್ನು ಜಾರಿ ಮಾಡಲು ಮುಂದಾಗಿದ್ದಾರೆ.
ಕೋವಿಡ್ ಸಂಬಂಧ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತುರ್ತು ಸಭೆ ನಡೆಸಿದರು. ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು ಸೇರಿದಂತೆ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಸಲಹೆ ಸೂಚನೆ ನೀಡಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ತೀವ್ರ ತಪಾಸಣೆ ನಡೆಸುವುದು. ಕೇರಳ, ಮಹಾರಾಷ್ಟ್ರದಿಂದ ಆಗಮಿಸುವವರಿಗೆ ‘ಆರ್ ಟಿ ಪಿ ಸಿ ಆರ್’ ವರದಿ ಕಡ್ಡಾಯ. ಸರ್ಕಾರಿ ಕಚೇರಿಗಳು, ಮಾಲ್ ಗಳಲ್ಲಿ ಕೆಲಸಮಾಡುವವರು, ಹೋಟೆಲ್, ರೆಸ್ಟೋರೆಂಟ್, ಚಿತ್ರಮಂದಿರ, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯ, ಜೈವಿಕ ಉದ್ಯಾನವನಗಳಲ್ಲಿ ಕಾರ್ಯನಿರ್ವಹಿಸುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು. ವಿಮಾನ ನಿಲ್ದಾಣದಲ್ಲಿ ನೆಗೆಟಿವ್ ವರದಿ ಇದ್ದವರಿಗಷ್ಟೇ ನಗರ ಪ್ರವೇಶಕ್ಕೆ ಅನುಮತಿ ಎಂದು ಸಿಎನ್ಸಿಎಂ ಬೊಮ್ಮಾಯಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.