General Election Bihar ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವ ವಹಿಸಲು ಸುಪ್ರೀಂ ನಿರ್ದೇಶನದ ಕೆಲವೇ ದಿನಗಳಲ್ಲಿ ಅಸ್ಸಾಂ-ಮೇಘಾಲಯ ಕೇಡರ್‌ನ ಐಪಿಎಸ್ ಅಧಿಕಾರಿ ಆನಂದ್ ಮಿಶ್ರಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಬಿಹಾರದಿಂದ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭರವಸೆ ನೀಡಿದ್ದರು, ಆ ಕಾರಣಕ್ಕೆ ನಾನು ರಾಜೀನಾಮೆ ನೀಡಿದ್ದೆ, ಆದರೆ ಆ ಬಳಿಕ ನನಗೆ ವಂಚಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ.
ಬಿಹಾರದ ಬಕ್ಸರ್ ಮೂಲದ ಆನಂದ್ ಮಿಶ್ರಾ ಮೇ 7ರಂದು ಸ್ವತಂತ್ರ ಅಭ್ಯರ್ಥಿಯಾಗಿ ಬಕ್ಸರ್‌ನಿಂದ ಸಂಸತ್ತಿಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ತಂಡದ ನೇತೃತ್ವವನ್ನು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಆನಂದ್ ಮಿಶ್ರಾ ಅವರಿಗೆ ವಹಿಸಿಕೊಡಲಾಗಿತ್ತು.
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿ ಮಣಿಪುರದ ಹೊರಗಿನ ಅಧಿಕಾರಿಗಳೊಂದಿಗೆ ಎಸ್‌ಐಟಿ ತಂಡವನ್ನು ರಚಿಸುವಂತೆ ತಿಳಿಸಲಾಗಿತ್ತು ಮತ್ತು ತನಿಖೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ಮೇ 3, 2023 ರಿಂದ, ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆದಿತ್ತು. ಈ ವೇಳೆ 220ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಸುಮಾರು 60,000 ಜನರು ಸ್ಥಳಾಂತರಗೊಂಡು ಈಗಲೂ ನಿರಾಶ್ರಿತರ ಶಿಬಿರಗಳಲ್ಲಿ ದಿನ ದೂಡುತ್ತಿದ್ದಾರೆ.
General Election Bihar ಮೈತೈ ಮತ್ತು ಕುಕಿ ಸಮುದಾಯಗಳ ನಡುವೆ ಭುಗಿಲೆದ್ದ ಈ ಹಿಂಸಾಚಾರ ದೇಶದ ಕಣ್ತೆರೆಯುವಂತೆ ಮಾಡಿತ್ತು. ಜನಸಮೂಹವು ಮಹಿಳೆಯರಿಬ್ಬರನ್ನು ಬೆತ್ತಲೆ ಮೆರವಣಿಗೆ ನಡೆಸಿ ಲೈಂಗಿಕ ದೌರ್ಜನ್ಯ ನಡೆಸಿದ ವಿಡಿಯೋ ವ್ಯಾಪಕ ಟೀಕೆಗೆ ಕಾರಣವಾಗಿತ್ತು.
ಬಿಜೆಪಿ ಆಡಳಿತದ ಮಣಿಪುರದಲ್ಲಿನ ಕಲಹದ ಬಗ್ಗೆ ಮೌನ ಮುರಿಯಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲಾಗಿತ್ತು. ಹಿಂಸಾಚಾರ, ಕಾನೂನು ಮತ್ತು ಸುವ್ಯವಸ್ಥೆ ಕುಸಿತದ ನಡುವೆಯೂ ಮೋದಿ ಆಡಳಿತವು ಎನ್. ಬಿರೇನ್ ಸಿಂಗ್ ಸರ್ಕಾರವನ್ನು ಸಮರ್ಥಿಸುತ್ತಲೇ ಬಂದಿತ್ತು.