Rotary Shivamogga ಪರಿಸರ ನಾಶ ಮಾಡುವುದನ್ನು ನಿಲ್ಲಿಸದಿದ್ದರೆ ಮುಂದಿನ ದಿನಗಳಲ್ಲಿ ದೊಡ್ಡ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಪರಿಸರ ರಕ್ಷಿಸುವ ಕಾಯಕದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಹಾಗೂ ಅಬ್ಬಲಗೆರೆ ಸರ್ಕಾರಿ ಪ್ರೌಢಶಾಲೆ ಇಂಟರ‍್ಯಾಕ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಹಸಿರೀಕರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ತಿಳಿಸಿದರು.
ಉತ್ತಮ ಪರಿಸರ ನಿರ್ಮಾಣ ಮಾಡಲು ಹೆಚ್ಚು ಗಿಡಗಳನ್ನು ನೆಟ್ಟು ಪೋಷಣೆ ಮಾಡುವ ಕೆಲಸ ಮಾಡಬೇಕು. ಪರಿಸರಕ್ಕೆ ಹಾನಿಯಾಗುವ ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ನಿಲ್ಲಿಸಬೇಕು ಎಂದರು.
ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಅಧ್ಯಕ್ಷ ಅರುಣ್ ದೀಕ್ಷಿತ್ ಮಾತನಾಡಿ, ಸಂಸ್ಥೆ ವತಿಯಿಂದ ನಿರಂತರವಾಗಿ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಪ್ರಸ್ತಕ ಸಾಲಿನಲ್ಲಿ ಹೆಚ್ಚು ಸಸಿಗಳನ್ನು ನೆಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು.
Rotary Shivamogga ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆ ಕಾರ್ಯದರ್ಶಿ ಶಶಿಕಾಂತ್ ನಾಡಿಗ್ ಮಾತನಾಡಿ, ಸಸಿಗಳನ್ನು ನೆಡುವ ಜತೆಯಲ್ಲಿ ಕಾಲ ಕಾಲಕ್ಕೆ ಗಮನಿಸಿ ಚೆನ್ನಾಗಿ ಬೆಳೆಯುವಂತೆ ಪೋಷಿಸುವ ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಜನ್ಮದಿನ ಹಾಗೂ ವಿಶೇಷ ಸಂದರ್ಭಗಳಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಸಂಕಲ್ಪ ಮಾಡಬೇಕು ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಇಂಟರ‍್ಯಾಕ್ಟ್ ಚೇರ್ಮನ್ ಶೇಷಗಿರಿ, ಎಲ್ಲರಿಗೂ ಸಸಿಗಳನ್ನು ವಿತರಿಸಿ ಜಾಗೃತಿ ಮೂಡಿಸಿದರು. ಕಾರ್ಯಕ್ರಮದಲ್ಲಿ ಡಾ. ಧನಂಜಯ, ಕಿಶೋರ್‌ಕುಮಾರ್, ಮುಖ್ಯಶಿಕ್ಷಕ ಮುರಳೀಧರ್ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.