DVS College of Arts and Science ವಿದ್ಯಾರ್ಥಿಗಳು ನಿರಂತರ ಪರಿಶ್ರಮ ವಹಿಸಿ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು.
ನಗರದ ಕುವೆಂಪು ರಂಗಮಂದಿರದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ 2025 ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಡಿವಿಎಸ್ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಯಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾದ ವಾತಾವರಣ ಸೃಷ್ಟಿಸಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಸ್ಥಾನ ಅಲಂಕರಿಸಿ ಸಮಾಜದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಸಂಸ್ಥೆ ಒದಗಿಸುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು. ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.
DVS College of Arts and Science ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಡಿವಿಎಸ್ ಶಾಲಾ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ್ದಾರೆ. ನೀವೂ ಸಹ ದೊಡ್ಡ ಕನಸನ್ನು ಕಂಡು ಸಾಕಾರಗೊಳಿಸಬೇಕು. ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಎಲ್ಲ ಮಾರ್ಗದರ್ಶನವನ್ನು ಸಂಸ್ಥೆ ನೀಡುತ್ತದೆ ಎಂದು ತಿಳಿಸಿದರು.
ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಸಿ.ಕೆ.ಶ್ರೀಧರ್, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
