Prabhuling Kavalikatti ಭಾರತ ಚುನಾವಣಾ ಆಯೋಗವು ದೇಶದ 16ರಾಜ್ಯಗಳು ಮತ್ತು 03 ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ-ಹಂತವಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಮಾಡಲು ಉದ್ದೇಶಿಸಿದ್ದು, ಮತದಾರರು ತಮ್ಮ ಹೆಸರನ್ನು ಹೊಸದಾಗಿ ಸೇರಿಸಲು, ತಿದ್ದುಪಡಿ ಮಾಡಲು ಅಥವಾ ತೆಗೆದುಹಾಕಲು ಈ ಪರಿಷ್ಕರಣೆ ಸದವಕಾಶವಾಗಿದ್ದು, ಅರ್ಹರು ಮಾಹಿತಿ ನೀಡಿ ಸಹಕರಿಸುವಂತೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದರು.
ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮಾತನಾಡಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯನ್ನು ದೋಷರಹಿತವಾಗಿ ಮಾಡುವುದು ಮತ್ತು 18 ವರ್ಷ ಪೂರ್ಣಗೊಳಿಸಿದ ಪ್ರತಿಯೊಬ್ಬ ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರಿಸುವುದು ಪರಿಷ್ಕರಣೆಯ ಮುಖ್ಯ ಉದ್ದೇಶವಾಗಿದೆ ಎಂದ ಅವರು ರಾಷ್ಟ್ರೀಯ ಮತ್ತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಮುಖಂಡರು ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೆ ಮತಗಟ್ಟೆ ಏಜೆಂಟರನ್ನು ನೇಮಿಸಿ, ಜಿಲ್ಲಾ ಚುನಾವಣಾ ಶಾಖೆಗೆ ಅವರ ವಿವರಗಳನ್ನು ಒದಗಿಸುವಂತೆ ಹಾಗೂ ಪರಿಷ್ಕರಣೆ ಸಂದರ್ಭದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವಂತೆ ಅವರು ಮನವಿ ಮಾಡಿದರು.
ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಕೈಗೊಳ್ಳಲು ಈಗಾಗಲೇ ಅಗತ್ಯವಿರುವ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದ ಅವರು 01.10.2026ನ್ನು ಅರ್ಹತಾ ದಿನಾಂಕವನ್ನಾಗಿ ಪರಿಗಣಿಸಿ ಪರಿಷ್ಕರಣೆ ನಡೆಸಲಾಗುವುದು. ಅದಕ್ಕಾಗಿ ಜೂನ್ 20ರಿಂದ 29ರವರೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದಲ್ಲದೇ ಪರಿಷ್ಕರಣಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿ-ಸಿಬ್ಬಂಧಿಗಳಿಗೆ ತರಬೇತಿಗಳನ್ನು ಆಯೋಜಿಸಲಾಗುವುದು. ಜೂನ್ 30ರಿಂದ ಜುಲೈ 29ರವರೆಗಿನ ಒಂದು ತಿಂಗಳ ಅವಧಿಯಲ್ಲಿ ಮತಗಟ್ಟೆ ಅಧಿಕಾರಿಗಳು ಪ್ರತಿ ಮತದಾರರ ಮನೆಗೂ ಹೋಗಿ ಮತದಾರರ ಗುರುತಿನ ಚೀಟಿ ಪರಿಶೀಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ 2002ರ ಮತದಾರರ ವಿಶೇಷ ಪರಿಷ್ಕರಣೆ ಪಟ್ಟಿ ಹಾಗೂ 2025ರ ಮತದಾರರ ಪಟ್ಟಿಯಲ್ಲಿನ ವ್ಯತ್ಯಾಸಗಳನ್ನು ಪರಿಶೀಲಿಸಲಾಗುವುದು. ಬಿಎಲ್‍ಒಗಳು ಮನೆ ಭೇಟಿಯ ವೇಳೆ ಪ್ರತಿ ಮನೆಗೂ ಎರಡು ನಮೂನೆಗಳನ್ನು ದ್ವಿಪ್ರತಿಯಲ್ಲಿ ನೀಡಿ, ಹೊಸ ಮಾಹಿತಿಯನ್ನು ಹಿಂಪಡೆದು, ಅದರಲ್ಲಿ ಒಂದು ನಮೂನೆಯನ್ನು ಅಧಿಕಾರಿಗಳು ಸಹಿ ಮಾಡಿ ಮತದಾರರಿಗೆ ಹಿಂದಿರುಗಿಸಲಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಸೂಚಿಸಿದ 12 ರೀತಿಯ ಮಾಹಿತಿಯಲ್ಲಿ ಯಾವುದಾದರೊಂದನ್ನು ಪುರಾವೆಯಾಗಿ ಪಡೆದುಕೊಳ್ಳುವರು ಎಂದರು.
Prabhuling Kavalikatti ಮತದಾರರ ಪಟ್ಟಿಯ ಕರಡನ್ನು ಆಗಸ್ಟ್ 05 ಪ್ರಕಟಿಸಲಾಗುವುದು. ಈ ಕರಡು ಪ್ರತಿಯ ಕುರಿತು ಮತದಾರರು ತಮ್ಮ ಆಕ್ಷೇಪಣೆ-ಅಹವಾಲುಗಳನ್ನು ಸೆಪ್ಟಂಬರ್ 04ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈ ಆಕ್ಷೇಪಣೆಗಳನ್ನು ಅಕ್ಟೋಬರ್ 03ರೊಳಗಾಗಿ ಇತ್ಯರ್ಥಗೊಳಿಸಲಾಗುವುದು. ಅಕ್ಟೋಬರ್ 10ರಂದು ಮತದಾರರ ಪಟ್ಟಿಯ ಅಂತಿಮ ಕರಡನ್ನು ಪ್ರಕಟಿಸಲಾಗುವುದು ಎಂದರು.
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕುರಿತಂತೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ತಿಳಿಸಿದ್ದು, ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕಾರ ಕೋರಿರುವುದಾಗಿ ತಿಳಿಸಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ಬಳಸಿಕೊಳ್ಳಲಾಗುವುದು. ಪ್ರತಿ ಬೂತ್‌ಗೆ ಏಜೆಂಟ್‌ಗಳನ್ನು ನೇಮಕ ಮಾಡುವಂತೆ ರಾಜಕೀಯ ಪಕ್ಷಗಳ ಮುಖಂಡರಿಗೆ ಸೂಚಿಸಲಾಗಿದೆ ಎಂದರು.
ಶಿವಮೊಗ್ಗ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ಕೈಗೊಳ್ಳಲು 1793 ಮತಗಟ್ಟೆ ಮಟ್ಟದ ಅಧಿಕಾರಿಗಳು ಪರಿಷ್ಕರಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. 01.06.2026 ರಂತೆ ಜಿಲ್ಲೆಯಲ್ಲಿ ಒಟ್ಟು 15,26,829 ಮತದಾರರನ್ನು ಈ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಒಳಪಡಿಸಲಾಗಿದೆ. ವಿಶೇಷ ಸಮಗ್ರ ಪರಿಷ್ಕರಣೆಯು ಮತದಾರರು, ರಾಜಕೀಯ ಪಕ್ಷಗಳು ಹಾಗೂ ಚುನಾವಣಾ ಆಯೋಗದ ಎಲ್ಲಾ ಹಂತಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಒಳಗೊಂಡಿರುವ ಪಾರದರ್ಶಕ ಪ್ರಕ್ರಿಯೆಯಾಗಿದೆ ಎಂದ ಅವರು, ಪ್ರಸ್ತುತ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಂದ 4376 ಬೂತ್ ಮಟ್ಟದ ಏಜೆಂಟರನ್ನು ನೇಮಕ ಮಾಡಲಾಗಿದೆ. ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್, ರಾಜಕೀಯ ಪಕ್ಷಗಳ ಮುಖಂಡರಾದ ಮಾಲತೇಶ್, ಜಗದೀಶ್, ಶಿವಾನಂದ್, ದೇವರಾಜ್, ಎಸ್.ಕೆ.ಪ್ರಭು, ಷಣ್ಮುಖಪ್ಪ, ಎಂ.ನಾರಾಯಣ್, ದೀಪಕ್ ಸಿಂಗ್ ಮತ್ತಿತರರು ಉಪಸ್ಥಿತರಿದ್ದರು.
Prabhuling Kavalikatti ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ.
Date:
